ಹೊಸದಿಲ್ಲಿ: ದೇಶದಲ್ಲಿನ ಕಟ್ಟಡ ನಿರ್ಮಾಣ ಕಾರ್ಮಿಕರಿಗಾಗಿ ತುರ್ತಾಗಿ ಸಹಾಯಧನ ಹಾಗೂ ಕಲ್ಯಾಣ ಕ್ರಮಗಳನ್ನು ಘೋಷಿಸಬೇಕೆಂದು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಗ್ರಹಿಸಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಸೋನಿಯಾ, ರಾಜ್ಯಗಳಲ್ಲಿರುವ ಕಟ್ಟಡ ಕಾರ್ಮಿಕರಿಗೆ ತಕ್ಷಣ ಸಹಾಯ ದೊರಕಿಸಬೇಕೆಂದು ಮನವಿ ಮಾಡಿದ್ದಾರೆ.
ದೇಶಾದ್ಯಂತ ಕೊರೊನಾ ವೈರಸ್ ಬಿಕ್ಕಟ್ಟು ಮುಂದುವರೆದಿದ್ದು, ಎಲ್ಲೆಡೆ ದಿಗ್ಬಂಧನ ಜಾರಿಯಲ್ಲಿವೆ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗಳು ಸಂಪೂರ್ಣ ನಿಂತುಹೋಗಿದ್ದು, ಈ ವಲಯದ ಕಾರ್ಮಿಕರು ಉದ್ಯೋಗವಿಲ್ಲದೆ ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಸೋನಿಯಾ ಅವರ ಪತ್ರ ಪ್ರಾಮುಖ್ಯತೆ ಪಡೆದುಕೊಂಡಿದೆ.