ನವದೆಹಲಿ: ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನ್ಯಾಯಾಧಿಕರಣ ನೀಡಿದ ತೀರ್ಪನ್ನು ಜಾರಿಗೊಳಿಸಬೇಕೆಂಬ ಕರ್ನಾಟಕದ ಮನವಿಗೆ ಸುಪ್ರೀಂಕೋರ್ಟ್ ಮನ್ನಣೆ ನೀಡಿದ್ದು,. ಇದೀಗ ತೀರ್ಪಿನ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಅಧಿಸೂಚನೆಯನ್ನೂ ಹೊರಡಿಸಿದೆ.
ಮಹದಾಯಿ ನದಿ ನೀರು ಹಂಚಿಕೆ ಸಂಬಂದ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂಕೋರ್ಟ್ ಫೆ.22ರಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ಇದಾದ ಮಾರನೇ ದಿನವೇ ಮೋದಿ ಸರ್ಕಾರ ಮಹದಾಯಿ ನದಿ ನೀರು ಹಂಚಿಕೆ ನ್ಯಾಯಾಧೀಕರಣಕ್ಕೆ ಅಂತಿಮ ವರದಿ ಸಲ್ಲಿಸಲು ತಿಳಿಸಿತ್ತು. ಇದೀಗ ಅಂತಿಮ ಅಧಿಸೂಚನೆ ಹೊರಡಿಸಿ ಕೇಂದ್ರ ಸರ್ಕಾರ ಆದೇಶ ಹೊರಹಾಕಿದೆ.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದು, ಬಹು ನಿರೀಕ್ಷಿತ ಮಹಾದಾಯಿ ನದಿ ನೀರಿನ ಹಂಚಿಕೆಯ ಐತೀರ್ಪನ್ನು ಕೇಂದ್ರ ಸರ್ಕಾರ ಇಂದು ಗೆಜೆಟ್ ಪ್ರಕಟಣೆ ಹೊರಡಿಸಿದೆ. ನಿನ್ನೆ ಕೇಂದ್ರ ಜಲ ಶಕ್ತಿ ಸಚಿವರನ್ನು ನಾವು ಭೇಟಿ ಮಾಡಿ ಚರ್ಚೆ ನಡೆಸಿದ್ದೆವು. ಪ್ರಧಾನಿ ನರೇಂದ್ರ ಮೋದಿ ಹಾಗೂ ಜಲಸಂಪನ್ಮೂಲ ಸಚಿವ ಗಜೇಂದ್ರ ಶೇಖಾವತ್ ಅವರಿಗೆ ಧನ್ಯವಾದಗಳು ಎಂದಿದ್ದಾರೆ.
ನೀರು ಹಂಚಿಕೆ ಬಗ್ಗೆ ನ್ಯಾಯಾಧಿಕರಣ ನೀಡಿದ ತೀರ್ಪನ್ನು ಜಾರಿಗೊಳಿಸಬೇಕೆಂಬ ಕರ್ನಾಟಕದ ಮನವಿಗೆ ಮನ್ನಣೆ ನೀಡಿರುವ ಸುಪ್ರೀಂಕೋರ್ಟ್, ತೀರ್ಪಿನ ಅನುಷ್ಠಾನಕ್ಕೆ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಆದೇಶಿಸಿತ್ತು. ಆ ಮೂಲಕ ಇದರಂತೆ ಕರ್ನಾಟಕಕ್ಕೆ 13.42 ಟಿಎಂಸಿ ನೀರು ಲಭಿಸಲಿದೆ. ಮಹಾರಾಷ್ಟ್ರಕ್ಕೆ 1.3 ಟಿಎಂಸಿ ಮತ್ತು ಗೋವಾಕ್ಕೆ 24 ಟಿಎಂಸಿ ನೀರು ಸಿಗಲಿದೆ. ಕರ್ನಾಟಕ 36 ಟಿಎಂಸಿ ನೀರಿಗೆ ಬೇಟಿಕೆಯಿಟ್ಟಿತ್ತು. ಈ ಬಗ್ಗೆ ಸುಪ್ರೀಂಕೋರ್ಟ್ ಜುಲೈ 15ಕ್ಕೆ ಅಂತಿಮ ವಿಚಾರಣೆ ನಡೆಸಲಿದೆ. ಈ ನಡುವೆ ಅಧಿಸೂಚನೆ ಹೊರಡಿಸದಂತೆ ಗೋವಾ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಿತ್ತು.
ಗೋವಾ ಸರ್ಕಾರ ಒಂದು ಕಡೆ ಕೇಂದ್ರದ ಮೇಲೆ ಒತ್ತಡ ಹೇರುತ್ತಾ ಕಾನೂನು ಹೋರಾಟಕ್ಕೆ ಮುಂದಾಗಿದ್ದರೆ, ಇತ್ತ ರಾಜ್ಯ ಸರ್ಕಾರ ಕೂಡಾ ಕೈಕಟ್ಟಿ ಕುಳಿತುಕೊಳ್ಳದೇ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ನೇತೃತ್ವದ ನಿಯೋಗ ಜಲಸಂಪನ್ಮೂಲ ಸಚಿವರನ್ನ ಭೇಟಿ ಮಾಡಿ ಅಧಿಸೂಚನೆ ಹೊರಡಿಸುವಂತೆ ಮನವಿ ಸಲ್ಲಿಸಿದ್ದರು.