ನವದೆಹಲಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ರಾಜ್ಯದ ವಿವಿಧ ಯೋಜನೆಗಳ ಕುರಿತು ಚರ್ಚಿಸಿದರು.
ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳಿಗೆ ನೇಮಕಾತಿ ಸಂದರ್ಭದಲ್ಲಿ ಸ್ಥಳೀಯ ಭಾಷೆಗಳಲ್ಲಿ ಜ್ಞಾನ ಹೊಂದಿರುವವರಿಗೆ ಅವಕಾಶ ಒದಗಿಸುವಂತೆ ಹಾಗೂ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯ (ಐಬಿಪಿಎಸ್) ನಿಯಮಗಳಿಗೆ ತಿದ್ದುಪಡಿ ಮಾಡುವಂತೆ ಸಚಿವರನ್ನು ಮನವಿ ಮಾಡಿದರು.
ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗಳು ಸಂವಿಧಾನ ಮಾನ್ಯತೆ ನೀಡಿರುವ ಎಲ್ಲ 22 ಭಾಷೆಗಳಲ್ಲಿ ನಡೆಸಬೇಕು ಹಾಗೂ ಕೇಂದ್ರ ಸರ್ಕಾರದ ಎಲ್ಲ ಇಲಾಖೆಗಳ ನೇಮಕಾತಿಯಲ್ಲೂ ಸ್ಥಳೀಯರಿಗೆ ಅವಕಾಶ ಒದಗಿಸುವ ಕುರಿತು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುವಂತೆ ಕೋರಿದರು.
ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಿಗೆ 2018-19ನೇ ಸಾಲಿನ ಬಾಕಿ ಉಳಿಸಿಕೊಂಡ ₹ 233 ಕೋಟಿ ಪರ್ಫಾರ್ಮನ್ಸ್ ಗ್ರಾಂಟ್ಸ್ ಬಿಡುಗಡೆ ಮಾಡಬೇಕು. ರಾಜ್ಯದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ಆದಾಯ ತೆರಿಗೆ ಕಾಯ್ದೆ 1961ರ ನಿಯಮ 10(29ಎ) ಅಡಿ ಸೇರಿಸಿ. ಕಾಫಿ ಮಂಡಳಿ, ರಬ್ಬರ್ ಮಂಡಳಿಗಳಂತೆ ಅದಕ್ಕೂ ಆದಾಯ ತೆರಿಗೆ ವಿನಾಯಿತಿ ನೀಡುವಂತೆ ಕುಮಾರಸ್ವಾಮಿ ಕೇಳಿಕೊಂಡರು.