ಭೋಪಾಲ್: ಮಧ್ಯಪ್ರದೇಶದಲ್ಲಿನ ರಾಜಕೀಯ ಹೈಡ್ರಾಮಾ ಕ್ಷಣ ಕ್ಷಣಕ್ಕೂ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಕಾಂಗ್ರೆಸ್ನ 19 ಶಾಸಕರು ಈಗಾಗಲೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಜ್ಯೋತಿರಾದಿತ್ಯ ಸಿಂಧಿಯಾ ಕೂಡ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಸಲ್ಲಿಕೆ ಮಾಡಿದ್ದಾರೆ.
ರಾಜೀನಾಮೆ ನೀಡಿರುವ 19 ಶಾಸಕರ ಪೈಕಿ ಓರ್ವ ಬಿಸಾಹು ಲಾಲ್ ಸಾಹು ಮಾತನಾಡಿದ್ದು, ಈಗಾಗಲೇ ನಾನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನಸಭೆಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿರುವೆ. ಬರುವ ದಿನಗಳಲ್ಲಿ ಕಾಂಗ್ರೆಸ್ನ ಇನ್ನೂ ಹಲವು ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಸೇರಿಕೊಳ್ಳಲಿದ್ದು, ಮಧ್ಯಪ್ರದೇಶದಲ್ಲಿ ಕಮಲ್ನಾಥ್ ಸರ್ಕಾರದ ಆಡಳಿತದಿಂದ ಅವರು ಬೇಸರಗೊಂಡಿದ್ದಾರೆ ಎಂದಿದ್ದಾರೆ.
ಇದೇ ವೇಳೆ ಮಾತನಾಡಿರುವ ಬಿಜೆಪಿ ಮುಖಂಡ ಶಿವರಾಜ್ ಸಿಂಗ್ ಚೌಹಾಣ್, ಕಾಂಗ್ರೆಸ್ ಮುಖಂಡ ಹಾಗೂ ಹಿರಿಯ ಶಾಸಕ ಬಿಸಾಹು ಜೀ ಬಿಜೆಪಿ ಸೇರ್ಪಡೆಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿರುವ 6 ಮಂದಿ ಸಚಿವರು ಸೇರಿದಂತೆ ಕಾಂಗ್ರೆಸ್ನ 19 ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.