ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯ ಉದ್ದಕ್ಕೂ ಶುಕ್ರವಾರ ಪಾಕಿಸ್ತಾನ ಶೆಲ್ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.
ಖಾರಿ ಕರ್ಮರಾ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಕುಗ್ರಾಮಗಳ ಮೇಲೆ ಶೆಲ್ ದಾಳಿ ನಡೆಸಿದೆ. ಕರ್ಮರಾ ಗ್ರಾಮದ ಮನೆಯೊಂದರ ಮೇಲೆ ನಡೆದ ದಾಳಿಯಲ್ಲಿ ದಂಪತಿ ಹಾಗೂ ಅವರ ಮಗ ಸಾವಿಗೀಡಾಗಿದ್ದಾರೆ. ಮೊಹಮ್ಮದ್ ರಫೀಕ್ (58), ಪತ್ನಿ ರಫಿಯಾ (50) ಮತ್ತು ಮಗ ಇರ್ಫಾನ್ (15) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಲ್ಲದೆ ಕೆಲವು ಮನೆಗಳು ಹಾನಿಗೀಡಾಗಿದ್ದು, ಮತ್ತೆ ಕೆಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪಾಕ್ನ ಅಪ್ರಚೋದಿತ ದಾಳಿಗೆ ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಬಿಜೆಪಿ ಮುಖಂಡ ವಾಸಿಂ ಅಹ್ಮದ್ ಬ್ಯಾರಿ, ಅವರ ತಂದೆ ಮತ್ತು ಸಹೋದರರನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದರು.