ಹೈದ್ರಾಬಾದ್(ತೆಲಂಗಾಣ) : ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಕೊರೊನಾ ಸೋಂಕುಪೀಡಿತ ವ್ಯಕ್ತಿಯ ದೇಹದಲ್ಲಿ ಮತ್ತೆ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದು ಮರಳಿ ಆಸ್ಪತ್ರೆ ದಾಖಲಿಸಲಾಗಿದೆ.
ಮಾರ್ಚ್ 23 ರಂದು ಕೊರೊನಾ ಪಾಸಿಟಿವ್ ಇದ್ದ ವ್ಯಕ್ತಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರದ ದಿನಗಳಲ್ಲಿ ಆತನನ್ನು ಪರೀಕ್ಷೆಗೆ ಒಳಪಡಿಸಿದಾಗ ನೆಗೆಟಿವ್ ಎಂದು ವರದಿ ಬಂದ ಹಿನ್ನೆಲೆ ಬಿಡುಗಡೆ ಮಾಡಲಾಗಿತ್ತು. ತದನಂತರ ದಿನಗಳಲ್ಲಿ ಎರಡನೇ ಬಾರಿಗೆ ಪರೀಕ್ಷೆ ಮಾಡಿದಾಗ ದೇಹದಲ್ಲಿ ಸೋಂಕಿನ ಅಂಶ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಮರಳಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವ್ಯಕ್ತಿಯನ್ನು ಗುರುವಾರ ಬಿಡುಗಡೆ ಮಾಡಲಾಗಿದ್ದು, ಶುಕ್ರವಾರ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಗಿಯು ಎಲ್ಲಿಯೂ ಹೆಚ್ಚು ತಿರುಗಾಡಲಿಲ್ಲ ಮತ್ತು ಅವರೊಂದಿಗೆ ಸಂಪರ್ಕ ಹೊಂದಿದವರನ್ನು ನಿಗಾದಲ್ಲಿಡಲಾಗಿದೆ. ಈ ಕುರಿತು ವಿಚಾರಣೆ ನಡೆಸಲಾಗಿದ್ದು, ವರದಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.