ನವದೆಹಲಿ: ಮುಂದಿನ ವರ್ಷದ ಆರಂಭದಲ್ಲಿ ಭಾರತವು ಕೊರೊನಾ ವೈರಸ್ ವಿರುದ್ಧ ಲಸಿಕೆ ನೀಡುವ ಸಾಧ್ಯತೆಯಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಹೇಳಿದರು.
ಮುಂದಿನ ವರ್ಷದ ಆರಂಭದಲ್ಲಿ ನಾವು ಒಂದಕ್ಕಿಂತ ಹೆಚ್ಚು ಮೂಲಗಳಿಂದ ದೇಶದಲ್ಲಿ ಕೋವಿಡ್ ಲಸಿಕೆಯನ್ನು ನಿರೀಕ್ಷಿಸುತ್ತಿದ್ದೇವೆ. ನಮ್ಮ ತಜ್ಞರ ಗುಂಪುಗಳು ದೇಶದಲ್ಲಿ ಲಸಿಕೆ ವಿತರಿಸಬೇಕು ಎಂಬುದರ ಕುರಿತು ಯೋಜಿಸಲು ಕಾರ್ಯತಂತ್ರಗಳನ್ನು ರೂಪಿಸುತ್ತಿವೆ ಎಂದು ಆರೋಗ್ಯ ಸಚಿವರು ತಿಳಿಸಿದರು.
ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಅವರು 2020 ರ ಅಂತ್ಯದ ವೇಳೆಗೆ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಲಸಿಕೆ ನೋಂದಣಿಗೆ ಸಿದ್ಧವಾಗಲಿದೆ ಎಂದು ಹೇಳಿದ್ದಾರೆ. ಸದ್ಯ ಸುಮಾರು 40 ಲಸಿಕೆಗಳು ಕ್ಲಿನಿಕಲ್ ಪ್ರಯೋಗಗಳಲ್ಲಿವೆ. ಅವುಗಳಲ್ಲಿ 10 ಲಸಿಕೆಗಳು ಮೂರನೇ ಹಂತದ ಪ್ರಯೋಗದಲ್ಲಿವೆ. ಇದು ಕೊನೆಯ ಹಂತದ ಕ್ಲಿನಿಕಲ್ ಪ್ರಯೋಗಗಳಾಗಿವೆ ಎಂದರು.
ಲಸಿಕೆಗಳು ಸಿದ್ಧವಾದ ನಂತರ ನ್ಯಾಯಯುತ ಮತ್ತು ನ್ಯಾಯಸಮ್ಮತವಾದ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ದತ್ತಾಂಶ ಸಂಗ್ರಹಿಸಲು ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಕೆಲಸ ಮಾಡುತ್ತಿದೆ. ದೇಶದ ಪ್ರತಿಯೊಬ್ಬರಿಗೂ ಲಸಿಕೆ ದೊರೆಯಬೇಕು ಎಂದು ಹೇಳಿದರು.