ದೆಹಲಿ: ಎಐಸಿಸಿ ಅಧ್ಯಕ್ಷರ ನೇಮಕ ಸಂಬಂಧ ದೆಹಲಿಯಲ್ಲಿ ಇಂದು ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕಾರಣಿ ಸಮಿತಿ ಸಭೆ ಯಾವುದೇ ನಿರ್ಧಾರ ಕೈಗೊಳ್ಳದೇ ಅಂತ್ಯವಾಗಿದೆ. ಸಭೆ ಬಳಿಕ ಪ್ರತಿಕ್ರಿಯಿಸಿರುವ ಎಐಸಿಸಿ ವಕ್ತಾರ ರಂದೀಪ್ ಸುರ್ಜೇವಾಲಾ, ಇಂದು ರಾತ್ರಿ 8 ಗಂಟೆಗೆ ಮತ್ತೊಮ್ಮೆ ಸಭೆ ನಡೆಸಿ ನೂತನ ಅಧ್ಯಕ್ಷರನ್ನು ಅವಿರೋಧವಾಗಿ ನೇಮಕ ಮಾಡಲಾವುದು ಎಂದು ಹೇಳಿದ್ದಾರೆ.
ಎಲ್ಲ ಪದಾಧಿಕಾರಿಗಳನ್ನು 5 ಗುಂಪುಗಳಾಗಿ ವಿಂಗಡಿಸಲಾಗಿದ್ದು, ಇವರು ನೀಡುವ ವರದಿ ಆಧರಿಸಿ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಅವರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಸೇರಿದ್ದ ಸಭೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಎ.ಕೆ.ಆ್ಯಂಟನಿ, ಕೆ.ಸಿ.ವೇಣುಗೋಪಾಲ್, ಗುಲಾಂ ನಬಿ ಅಜಾದ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕೈ ಹಿರಿಯ ನಾಯಕರು ಭಾಗವಹಿಸಿದ್ದರು.
ಈಗಾಗಲೇ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿ ಅಧ್ಯಕ್ಷರ ರೇಸ್‌ನಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು, ಎಲ್ಲ ರಾಜ್ಯಗಳ ಕಾಂಗ್ರೆಸ್ ಘಟಕದ ಅಧ್ಯಕ್ಷರು, ಸಂಸದರು ಹಾಗೂ ಪದಾಧಿಕಾರಿಗಳು ನೂತನ ಅಧ್ಯಕ್ಷರನ್ನು ನೇಮಕ ಮಾಡಲಿದ್ದಾರೆ.