ಕೋಯಿಕ್ಕೋಡ್: ಕೇರಳದ ಕೋಯಿಕ್ಕೋಡ್ನಲ್ಲಿ ನಡೆದ ವಿಮಾನ ದುರಂತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 53 ವರ್ಷದ ಪ್ರಯಾಣಿಕರೊಬ್ಬರು ಶನಿವಾರ ಮೃತಪಟ್ಟಿದ್ದಾರೆ.
ಆಗಸ್ಟ್ 7 ರಂದು ಇಲ್ಲಿ ನಡೆದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಅಪಘಾತದಲ್ಲಿ ವಯನಾಡು ಮೂಲದ ವಿ.ಇಬ್ರಾಹಿಂ ಗಾಯಗೊಂಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಕೊನೆಯುಸಿರೆಳೆದಿದ್ದಾರೆ. ಇವರ ಸಾವಿನಿಂದ ಈ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ದುಬೈನಿಂದ 190 ಜನರೊಂದಿಗೆ ಕರಿಪುರ ವಿಮಾನ ನಿಲ್ದಾಣಕ್ಕೆ ಬಂದಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ರನ್ವೇನಲ್ಲಿ ಅಪಘಾತಕ್ಕೀಡಾಗಿತ್ತು. ಪೈಲಟ್ ಮತ್ತು ಸಹ ಪೈಲಟ್ ಸೇರಿದಂತೆ ಹದಿನೆಂಟು ಜನರು ಸಾವನ್ನಪ್ಪಿದ್ದರು ಮತ್ತು ಹಲವಾರು ಮಂದಿ ಗಾಯಗೊಂಡಿದ್ದರು. ಇತ್ತೀಚೆಗಷ್ಟೆ ಓರ್ವ ಗಾಯಾಳು ಸಾವಿಗೀಡಾಗಿ ಮೃತರ ಸಂಖ್ಯೆ 19ಕ್ಕೆ ಏರಿಕೆಯಾಗಿತ್ತು, ಇದೀಗ 20ಕ್ಕೆ ಏರಿಕೆಯಾಗಿದೆ.