ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವ ಜ್ಯೋತಿರಾದಿತ್ಯ ಸಿಂದಿಯಾ ಬಿಜೆಪಿ ಸೇರ್ಪಡೆಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದ್ದು, ಇದರ ಬೆನ್ನಲ್ಲೇ ಪ್ರದಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಮಹತ್ವದ ಸಭೆ ನಡೆದಿದೆ.
ಮಾರ್ಚ್ 12ಕ್ಕೆ ಬಿಜೆಪಿ ಸೇರಲಿರುವ ಸಿಂದಿಯಾ?
ಬೆಳಿಗ್ಗೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವ ಜ್ಯೋತಿರಾದಿತ್ಯ ಸಿಂದಿಯಾ ಮಾರ್ಚ್ 12ಕ್ಕೆ ಬಿಜೆಪಿ ಸೇರಿಕೊಳ್ತಾರೆ ಎಂದೇ ಹೇಳಲಾಗುತ್ತಿದೆ. ಬಿಜೆಪಿ ಸೇರ್ಪಡೆ ಸಮಾರಂಭ ಭೋಪಾಲ್ನಲ್ಲಿ ನಡೆಯಲಿದೆ ಎಂಬ ಮಾಹಿತಿ ದೊರೆತಿದೆ.
ಮಧ್ಯಂತರ ಚುನಾವಣೆಗೆ ಕಮಲ್ನಾಥ್ ಕರೆ:
ಮಧ್ಯಂತರ ಚುನಾವಣೆ ಎದುರಿಸಲು ಸಜ್ಜಾಗಿ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ನಾಥ್ ಪಕ್ಷದ ನಾಯಕರು, ಕಾರ್ಯಕರ್ತರಿಗೆ ಕರೆ ನೀಡಿದ್ದು, ತಾವು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ.
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:
ಮೋದಿ ನೇತೃತ್ವದ ಸಭೆಯಲ್ಲಿ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪ್ರಮುಖ ಸಚಿವರು ಭಾಗಿಯಾಗಿದ್ದು, ಇಂದಿನ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ನ 22 ಶಾಸಕರು ಒಂದೇ ದಿನ ರಾಜೀನಾಮೆ ನೀಡಿರುವ ಕಾರಣ ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು ಈಗಾಗಲೇ ಫೈನಲ್ ಹಂತಕ್ಕೆ ತಲುಪಿದೆ. ಹೀಗಾಗಿ ಕಮಲ್ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಹಾದಿ ಕಾಣದಂತಾಗಿದ್ದು, ರಾಜೀನಾಮೆ ನೀಡುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.
ಜ್ಯೋತಿರಾದಿತ್ಯ ಸಿಂದಿಯಾ ಬಿಜೆಪಿ ಸೇರ್ಪಡೆಯಾಗುವುದು ಬಹುತೇಕ ಖಚಿತಗೊಂಡಿರುವ ಕಾರಣ ರಾಜ್ಯಸಭೆ ಟಿಕೆಟ್ ನೀಡಿ, ಕೇಂದ್ರದಲ್ಲಿ ಮಂತ್ರಿ ಸ್ಥಾನ ನೀಡಲು ಬಿಜೆಪಿ ಮುಂದಾಗಿದೆ ಎಂಬ ಮಾತು ಕೇಳಿ ಬಂದಿದೆ. ಹೀಗಾಗಿ ಮಾರ್ಚ್ 26ರಂದು ರಾಜ್ಯಸಭೆಯ ಕೆಲ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಗಳ ಹೆಸರು ಫೈನಲ್ ಮಾಡಲಿದೆ. ಅದೇ ಕಾರಣಕ್ಕಾಗಿ ಇದೀಗ ಮೋದಿ ನೇತೃತ್ವದಲ್ಲಿ ಸಭೆ ಸೇರಿರುವ ಸಾಧ್ಯತೆ ದಟ್ಟವಾಗಿದೆ.
ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಭೇಟಿಯಾಗಿದ್ದ ಜ್ಯೋತಿರಾದಿತ್ಯ ಸಿಂದಿಯಾ ಕಾಂಗ್ರೆಸ್ನ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ಮುಖಂಡೆ ಹಾಗೂ ಜ್ಯೋತಿರಾದಿತ್ಯ ಸಿಂದಿಯಾ ಚಿಕ್ಕಮ್ಮ ಯಶೋಧರಾ, ಅವರು ಘರ್ ವಾಪಸಿ ಆಗುತ್ತಿರುವುದು ಸಂತಸ ತಂದಿದೆ ಎಂದಿದ್ದರು.