ನವದೆಹಲಿ: 71ನೇ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ರಾಜಧಾನಿ ದೆಹಲಿಯ ರಾಜಪಥದಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಧ್ವಜಾರೋಹಣ ನೆರವೇರಿಸಿದರು.
ಈ ಬಾರಿಯ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸನಾರೋ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾರತೀಯ ಸೇನಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಭೂಸೇನಾ ಮುಖ್ಯಸ್ಥ ಜನರಲ್ ನರವನೆ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್, ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ಆರ್ ಕೆ ಎಸ್ ಭದೌರಿಯಾ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ರಾಷ್ಟ್ರಪತಿ, 21-ಗನ್ ಸೆಲ್ಯೂಟ್ ಸ್ವೀಕರಿಸುವ ಮೂಲಕ ಪಥ ಸಂಚಲನ ಪ್ರಾರಂಭವಾಯಿತು.
ಇದಕ್ಕೂ ಮೊದಲು ಇಂಡಿಯಾ ಗೇಟ್ ಬಳಿ ಹೊಸದಾಗಿ ನಿರ್ಮಿಸಲಾಗಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು.