ನವದೆಹಲಿ: ಕಳೆದ ಫೆಬ್ರವರಿಯಲ್ಲಿ ದೆಹಲಿಯ ಈಶಾನ್ಯ ಭಾಗದಲ್ಲಿ ನಡೆದ ಹಿಂಸಾಚಾರ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ಆಮ್ ಆದ್ಮಿ ಪಕ್ಷ (ಎಎಪಿ)ದ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ಸಲ್ಲಿಸಿದ್ದ ಮೂರು ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ
ಫೆಬ್ರವರಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಪರ ಮತ್ತು ವಿರೋಧಿ ಗುಂಪುಗಳ ನಡುವೆ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ 53 ಜನ ಸಾವನ್ನಪ್ಪಿದ್ದರು. ಗುಪ್ತಚರ ಇಲಾಖೆ (ಐಬಿ) ಅಧಿಕಾರಿ ಅಂಕಿತ್ ಶರ್ಮಾರ ಕೊಲೆ ಆರೋಪದಡಿ ಆಮ್ ಆದ್ಮಿ ಮುಖಂಡ ತಾಹೀರ್ ಹುಸೇನ್ರನ್ನು ಅರೆಸ್ಟ್ ಮಾಡಲಾಗಿತ್ತು. ಪಕ್ಷದಿಂದ ಕೂಡ ಅಮಾನತು ಮಾಡಲಾಗಿತ್ತು.
ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಗಳ ವಿಚಾರಣೆ ನಡೆಸಿರುವ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಮೂರ್ತಿ ಅರ್ಜಿ ವಜಾಗೊಳಿಸಿ ಆದೇಶ ನೀಡಿದ್ದಾರೆ. ಘಟನೆಗೆ ಕೆಲ ಸ್ಥಳೀಯ ಜನರು ಸಾಕ್ಷಿಗಳಾಗಿದ್ದು, ಆರೋಪಿಗೆ ಜಾಮೀನು ನೀಡಿದರೆ ಅವರು ಸಾಕ್ಷಿದಾರರಿಗೆ ಬೆದರಿಕೆವೊಡ್ಡುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.