ನವದೆಹಲಿ: ಮಹಾಮಾರಿ ಕೊರೊನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಮಳೆಗಾಲದ ಅಧಿವೇಶನ ಬರುವ ಬುಧವಾರ ಮೊಟಕುಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ನಿನ್ನೆ ಸಂಜೆ ನಡೆದ ಸಂಸದೀಯ ವ್ಯವಹಾರ ಸಲಹಾ ಸಮಿತಿ ಸಭೆಯಲ್ಲಿ ಪ್ರತಿಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿದು ಬಂದಿದೆ.
ಲೋಕಸಭೆ ಅಧಿವೇಶನದಲ್ಲಿ ಭಾಗಿಯಾಗಿದ್ದ ಮೂವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಬೆನ್ನಲ್ಲೇ ಸಂಸದರ ಸುರಕ್ಷೆ ಬಗ್ಗೆ ಕೇಂದ್ರ ಸರ್ಕಾರ ಕಾಳಜಿ ವಹಿಸಿದೆ. ಹೀಗಾಗಿ ಈ ನಿರ್ಧಾರ ಕೈಗೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಅಧಿವೇಶನ ಮೊಟಕುಗೊಳಿಸುವುದಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಓಂ ಬಿರ್ಲಾ ಮಾಹಿತಿ ನೀಡಲಿದ್ದಾರೆ.
ಸೆಪ್ಟೆಂಬರ್ 14ರಿಂದ ಆರಂಭಗೊಂಡಿರುವ ಸಂಸತ್ ಅಧಿವೇಶನ ಯಾವುದೇ ರಜೆ ತೆಗೆದುಕೊಳ್ಳದೇ ಅಕ್ಟೋಬರ್ 1ರವರೆಗೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಇಲ್ಲಿಯವರೆಗೆ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಹ್ಲಾದ್ ಪಟೇಲ್ ಸೇರಿದಂತೆ 30 ಸಂಸದರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಬಿಜೆಪಿ ರಾಜ್ಯಸಭೆ ಸದಸ್ಯ ವಿನಯ್ ಸಹಸ್ರಬುದ್ದೆ ಅವರಲ್ಲೂ ಸೋಂಕು ಕನ್ಫರ್ಮ್ ಆಗಿತ್ತು. ಹೀಗಾಗಿ ಕೇಂದ್ರ ಸರ್ಕಾರ ಅಧಿವೇಶನ ಮೊಟಕುಗೊಳಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಸಂಸತ್ ಅಧಿವೇಶನ ಆರಂಭಗೊಳ್ಳುವುದಕ್ಕೂ ಮುಂಚಿತವಾಗಿ ಎಲ್ಲರಿಗೂ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಲೋಕಸಭೆಯ 17 ಸದಸ್ಯರು ಹಾಗೂ ರಾಜ್ಯ ಸಭೆಯ 8 ಸದಸ್ಯರಲ್ಲಿ ಕೊರೊನಾ ಸೋಂಕು ಇರುವುದು ಕನ್ಫರ್ಮ್ ಆಗಿತ್ತು.