ಬೆಂಗಳೂರು: ಅನರ್ಹ ಶಾಸಕರ ರಾಜಕೀಯ ಭವಿಷ್ಯದ ಕುರಿತು ಇಂದು ಸುಪ್ರೀಂಕೋರ್ಟ್ನಿಂದ ಮಹತ್ವದ ತೀರ್ಪು ಹೊರಬಿದ್ದಿದೆ. ಇದೀಗ ರಾಜ್ಯದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಅವರ ಸ್ಪರ್ಧೆ ಮಾಡಲು ಗ್ರೀನ್ ಸಿಗ್ನಲ್ ನೀಡಲಾಗಿದೆ.
ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಬೀಳಲು ಮುಖ್ಯ ಕಾರಣವಾಗಿದ್ದ 17 ಅನರ್ಹ ಶಾಸಕರು ಇದೀಗ ಬಿಜೆಪಿ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತಗೊಂಡಿದ್ದು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾತನಾಡಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಕೋರ್‌ಕಮಿಟಿ ಸಭೆ ಬಳಿಕ ಮಾತನಾಡಿದ ಅವರು, ಸುಪ್ರೀಂಕೋರ್ಟ್ ತೀರ್ಪು ಬಳಿಕ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಭೇಟಿ ಮಾಡಿ ಅನರ್ಹ ಶಾಸಕರು ಮಾತುಕತೆ ನಡೆಸಿದ್ದಾರೆ. ನಾಳೆ ಅವರೆಲ್ಲರೂ ಬಿಜೆಪಿ ಕಚೇರಿಗೆ ಆಗಮಿಸಿ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ಘೋಷಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೊತೆ ಅನರ್ಹರ ಪಕ್ಷ ಸೇರ್ಪಡೆ ಕುರಿತು ಮಾತುಕತೆ ನಡೆಸಿದ್ದು 10 ಗಂಟೆಗೆ ಅನರ್ಹರನ್ನು ಕಟೀಲ್ ಬಿಜೆಪಿ ಸದಸ್ಯತ್ವ ನೀಡಿ ಪಕ್ಷಕ್ಕೆ ಸ್ವಾಗತ ಮಾಡಲಿದ್ದಾರೆ ಎಂದರು.
ಉಪ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಕುರಿತು ಇನ್ನೂ ನಿರ್ಧಾರ ಆಗಿಲ್ಲ, ಸದ್ಯ ಪಕ್ಷ ಸೇರ್ಪಡೆ ನಡೆಯಲಿದ್ದು, ನಂತರ ಈ ಬಗ್ಗೆ ಮತ್ತೊಮ್ಮೆ ಸಭೆ ಸೇರಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸ್ಪಷ್ಟಪಡಿಸಿದರು. ಇದೇ ವೇಳೆ, ಚುನಾವಣೆ ನಡೆಯುವ ಎಲ್ಲ 15 ಕ್ಷೇತ್ರಗಳಿಗೂ ಬಿಜೆಪಿ ಪ್ರಮುಖ ನಾಯಕರನ್ನ ಉಸ್ತುವಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿಕೆ!
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾಳೆ ಬೆಳಗ್ಗೆ 10:30ಕ್ಕೆ ಅನರ್ಹ ಶಾಸಕರೆಲ್ಲರೂ ಬಿಜೆಪಿ ಸೇರಿಕೊಳ್ಳಲಿದ್ದು, ಈ ವೇಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉಪಸ್ಥಿತಿ ಇರಲಿದೆ ಎಂದಿದ್ದಾರೆ. ಈಗಾಗಲೇ ಕೆಲ ಅನರ್ಹ ಶಾಸಕರು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನ ಭೇಟಿ ಮಾಡಿ ಮಾತುಕತೆ ಸಹ ನಡೆಸಿದ್ದು, ಬಿಜೆಪಿ ಸೇರಿಕೊಳ್ಳಲು ಸಜ್ಜುಗೊಂಡಿದ್ದಾರೆ ಎಂದು ಇದಕ್ಕೂ ಮೊದಲೇ ಡಿಸಿಎಂ ತಿಳಿಸಿದ್ದಾರೆ.
ಉಪಚುನಾವಣೆಗೆ ಯಾರಿಗೆ ಟಿಕೆಟ್ ನೀಡಬೇಕು ಎಂಬುದರ ಕುರಿತು ಇಲ್ಲಿಯವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಆದರೆ, ಅವರು ಬಿಜೆಪಿ ಸೇರಿಕೊಳ್ಳುವುದು ಕನ್ಫರ್ಮ್ ಆಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ಇದೇ ವಿಷಯಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಹಾಗೂ ಬಿಸಿ ಪಾಟೀಲ್ ಮಾತನಾಡಿದ್ದು, ತಾವು ಬಿಜೆಪಿ ಪಕ್ಷಕ್ಕೆ ಸೇರಿಕೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.