ನವದೆಹಲಿ/ಬೆಂಗಳೂರು: ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿಸದಸ್ಯ ವಿಭಾಗೀಯ ಪೀಠದಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆಯಾಗಿದೆ. ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಬರಲು ತಡವಾದ ಕಾರಣದಿಂದ ಅರ್ಜಿ ವಿಚಾರಣೆಯನ್ನು ಮುಂದೂಡಲಾಯಿತು.
ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವ ವಿಧಾನಸಭೆಯ ಈ ಹಿಂದಿನ ಸ್ಪೀಕರ್ (ಕೆ. ಆರ್ ರಮೇಶ್ ಕುಮಾರ್) ಆದೇಶದ ಸಿಂಧುತ್ವ ಪ್ರಶ್ನಿಸಿ, 17 ಅನರ್ಹ ಶಾಸಕರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿಸದಸ್ಯ ವಿಭಾಗೀಯ ಪೀಠ, ಒಂದೇ ಅರ್ಜಿಗೆ ವಾರಗಟ್ಟಲೆ ವಾದ-ಪ್ರತಿವಾದ ಆಲಿಸಲು ಸಾಧ್ಯವಿಲ್ಲ. ವಾದ-ಪ್ರತಿವಾದಗಳು ಇಂದೇ ಪೂರ್ಣಗೊಳ್ಳಬೇಕು ಎಂದು ಸೂಚಿಸಿದ್ರು.
ರಾಜ್ಯದಲ್ಲಿ ಅನರ್ಹ ಶಾಸಕರ 15 ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಉಪಚುನಾವಣೆ ವೇಳಾಪಟ್ಟಿ ಘೋಷಣೆ ಮಾಡಿರುವ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ನಡೆಸುತ್ತಿರುವ ವಿಚಾರಣೆ ಹೆಚ್ಚಿನ ಮಹತ್ವ ಪಡೆದಿದೆ.
ಅನರ್ಹ ಶಾಸಕರ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ತೆಗೆದುಕೊಳ್ಳುವಂತೆ ಕೇಂದ್ರ ಚುನಾವಣೆ ಆಯೋಗ ಸುಪ್ರೀಂಕೋರ್ಟ್ಗೆ ಮನವಿ ಮಾಡಿದೆ. ಈ ನಡುವೆ ಕಾಂಗ್ರೆಸ್ ಪಕ್ಷದ ಪರ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ಶಾಸಕರ ಅರ್ಜಿ ವಿಚಾರಣೆಯನ್ನು ಒಂದು ತಿಂಗಳು ಮುಂದೂಡುವಂತೆ ಮನವಿ ಮಾಡಿದ್ದಾರೆ. ಅನರ್ಹ ಶಾಸಕರೂ ಸಹ ತುರ್ತಾಗಿ ವಿಚಾರಣೆ ನಡೆಸುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.
ಅಯೋಧ್ಯೆ ಪ್ರಕರಣದ ವಿಚಾರಣೆಯಿಂದಾಗಿ ಸುಪ್ರೀಂಕೋರ್ಟ್ ಅನರ್ಹ ಶಾಸಕರ ಅರ್ಜಿ ತುರ್ತು ವಿಚಾರಣೆಗೆ ನಿರಾಕರಿಸಿತ್ತು. ಈಗ ಅಯೋಧ್ಯೆ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದರಿಂದ ಅನರ್ಹ ಶಾಸಕರ ಅರ್ಜಿಯನ್ನು ಕೈಗೆತ್ತಿಕೊಂಡಿದೆ.