ಪುಣೆ(ಮಹಾರಾಷ್ಟ್ರ): ಜಗತ್ತಿನ ಅತಿ ದೊಡ್ಡ ಕೊರೊನಾ ಲಸಿಕೆ ಉತ್ಪಾದನಾ ಕೇಂದ್ರವಾದ ಪುಣೆಯ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.
ಲಸಿಕೆ ತಯಾರಿಕಾ ಕೇಂದ್ರದಿಂದ ಅನತಿ ದೂರದಲ್ಲಿರುವ ಮಂಜ್ರಿ ಪ್ಲಾಂಟ್ನ ಟರ್ಮಿನಲ್ ಒಂದರ ನಿರ್ಮಾಣ ಹಂತದ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೋವಿಶೀಲ್ಡ್ ಲಸಿಕೆ ಉತ್ಪಾದನೆಗೆ ಯಾವುದೇ ತೊಂದರೆಯಿಲ್ಲ ಎಂದು ಮೂಲಗಳು ತಿಳಿಸಿವೆ.
ಈಗ ಸದ್ಯಕ್ಕೆ ವಿಜ್ಞಾನಿಗಳನ್ನು ಸ್ಥಳಾಂತರ ಮಾಡಲಾಗಿದ್ದು, ಅವಘಡ ನಡೆದ ಸ್ಥಳದಿಂದ ಮೂವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಮಾಹಿತಿ ಪಡೆಯುತ್ತಿರುವ ಉದ್ಧವ್ ಠಾಕ್ರೆ
ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಪುಣೆ ಮುನಿಸಿಪಲ್ ಆಯುಕ್ತರೊಂದಿಗೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಸಂಪರ್ಕದಲ್ಲಿದ್ದು, ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ ಎಂದು ಮಹಾರಾಷ್ಟ್ರ ಸಿಎಂ ಕಚೇರಿ ಸ್ಪಷ್ಟನೆ ನೀಡಿದೆ.
ಸ್ಥಳಕ್ಕೆ ಎನ್ಡಿಆರ್ಎಫ್ ತಂಡ ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದೆ.