ಗಾಂಧಿನಗರ (ಗುಜರಾತ್): ಪೋಷಕರ ಸಂಘಗಳು ಮತ್ತು ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚೆ ನಡೆಸಿದ ಬಳಿಕ ವಿದ್ಯಾರ್ಥಿಗಳು ಹಾಗೂ ಜನರ ಹಿತದೃಷ್ಟಿಯಿಂದ ಎಲ್ಲ ಖಾಸಗಿ ಶಾಲೆಗಳ ಶುಲ್ಕದಲ್ಲಿ ಶೇ.25ರಷ್ಟು ರಿಯಾಯಿತಿ ನೀಡಲು ಗುಜರಾತ್ ಸರ್ಕಾರ ಬುಧವಾರ ನಿರ್ಧರಿಸಿದೆ.
"ಪಾಲಕರ ಪ್ರಾತಿನಿಧ್ಯಗಳನ್ನು ಗಮನದಲ್ಲಿಟ್ಟುಕೊಂಡು, ಜನರ ಹಿತದೃಷ್ಟಿಯಿಂದ ಸಿಬಿಎಸ್ಇ, ಐಬಿ, ಐಸಿಎಸ್ಇ ಮತ್ತು ಸಿಎಸ್ಇ ಸೇರಿದಂತೆ ಎಲ್ಲ ಖಾಸಗಿ ಶಾಲೆಗಳಲ್ಲಿ ಶುಲ್ಕದಲ್ಲಿ ಶೇ.25ರಷ್ಟು ರಿಯಾಯಿತಿ ನೀಡಲು ಗುಜರಾತ್ ಸರ್ಕಾರ ನಿರ್ಧರಿಸಿದೆ" ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಕುರಿತು ಮಾತನಾಡಿದ ಶಿಕ್ಷಣ ಸಚಿವ ಭೂಪೇಂದ್ರ ಸಿಂಹ ಚುಡಸ್ಮಾ "ಗುಜರಾತ್ ಹೈಕೋರ್ಟ್ ನಿರ್ದೇಶನಗಳ ಮೇರೆಗೆ ಶಾಲಾ ಆಡಳಿತ ಮಂಡಳಿ ಮತ್ತು ಪೋಷಕರ ಸಂಘಗಳೊಂದಿಗೆ ಸಚಿವರ ಪರಿಷತ್ತು ಸಭೆಯನ್ನು ನಡೆಸಿದ್ದು, ಈ ವೇಳೆ ಶೇ.25ರಷ್ಟು ರಿಯಾಯಿತಿ ನೀಡುವ ಪ್ರಸ್ತಾಪಕ್ಕೆ ಒಪ್ಪಿಗೆ ಸೂಚಿಸಲಾಗಿದೆ" ಎಂದರು.
ಶುಲ್ಕದಲ್ಲಿ ಶೇ.25 ರಷ್ಟು ರಿಯಾಯಿತಿ ನೀಡಲು ಒಪ್ಪಿಕೊಂಡ ಶಾಲೆಗಳಿಗೆ ಸಚಿವರು ಧನ್ಯವಾದ ಅರ್ಪಿಸಿದ್ದಾರೆ. ಇನ್ನು ಪೂರ್ಣ ಶುಲ್ಕ ಪಾವತಿಸಿದವರಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
ಇನ್ನು ಮುಖ್ಯಮಂತ್ರಿ ವಿಜಯ್ ರೂಪಾನಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಕೇಂದ್ರದ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಮೂಲಕ ರಾಜ್ಯವು ಶಿಕ್ಷಣ ಕ್ಷೇತ್ರದಲ್ಲಿ ಸರ್ವಾಂಗೀಣ ಅಭಿವೃದ್ಧಿಯನ್ನು ಮಾಡುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.