ಚಂಡೀಗಢ : ನವದೆಹಲಿಯಲ್ಲಿ ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ಹಿಂಸಾಚಾರ ನಡೆದ ಹಿನ್ನೆಲೆ ಹರಿಯಾಣದ ಸಿಎಂ ಮನೋಹರಲಾಲ್ ಕಟ್ಟರ್ ತಮ್ಮ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿದ್ದಾರೆ.
ಟ್ರ್ಯಾಕ್ಟರ್ ರ್ಯಾಲಿ ತಡೆದ ಹಿನ್ನೆಲೆ ಹಿಂಸಾಚಾರ ಭುಗಿಲೆದ್ದಿದ್ದು, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ತಾರಕಕ್ಕೆ ಏರಿತ್ತು. ಈ ಹಿನ್ನೆಲೆ ಹರಿಯಾಣ ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಸಿಎಂ ಮನೋಹರಲಾಲ್ ಕಟ್ಟರ್ ಪೊಲೀಸ್ ಮಹಾನಿರ್ದೇಶಕ ಮನೋಜ್ ಯಾದವ್ಗೆ ಈ ಬಗ್ಗೆ ನಿರ್ದೇಶನ ನೀಡಿದ್ದು, ಯಾವುದೇ ಕಾರಣಕ್ಕೂ ದೆಹಲಿಯ ಪ್ರತಿಭಟನೆ ರಾಜ್ಯದಲ್ಲಿ ಹಿಂಸಾಚಾರಕ್ಕೆ ಕಾರಣವಾಗಬಾರದು ಎಂಬ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: 60 ದಿನಗಳ ರೈತ ಹೋರಾಟದಲ್ಲಿ ಇದೇ ಮೊದಲ ಬಾರಿಗೆ ಹಿಂಸಾಚಾರ: ಇಷ್ಟು ದಿನದ ಬೆಳವಣಿಗೆಗಳ ಕ್ವಿಕ್ ಲುಕ್
ದೆಹಲಿಯಲ್ಲಿ ಹಿಂಸಾಚಾರ ನಡೆಯುತ್ತಿದ್ದಂತೆ ಉನ್ನತಾಧಿಕಾರಿಗಳ ಸಭೆ ಕರೆದ ಮನೋಹರಲಾಲ್ ಕಟ್ಟರ್ ಕೂಲಂಕಷವಾಗಿ ಚರ್ಚೆ ನಡೆಸಿ, ಅಭಿಪ್ರಾಯ ಸಂಗ್ರಹಿಸಿ ಈ ರೀತಿಯ ನಿರ್ಧಾರ ಕೈಗೊಂಡಿದ್ದಾರೆ.
ಇದರ ಜೊತೆಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಸಮೀಪದಲ್ಲಿರುವ ಫರೀದಾಬಾದ್ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು, ಕೆಲ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.