ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈಗ ಒಟ್ಟು ಸೋಂಕಿತರಲ್ಲಿ ಶೇಕಡಾ 20.53ರಷ್ಟು ಮಂದಿ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೆ ಶೇಕಡಾ 77.77ರಷ್ಟು ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರ ಜೊತೆಗೆ ಕೇವಲ ಶೇಕಡಾ 1.69ರಷ್ಟು ಸೋಂಕಿತರು ಕೊರೊನಾಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಬರೋಬ್ಬರಿ 89,706 ಸೋಂಕಿತರು ಪತ್ತೆಯಾಗಿದ್ದು, 1,115 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 43,70,129 ಹಾಗೂ ಮೃತರ ಸಂಖ್ಯೆ 73,890ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 33,98,845 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 8,97,394 ಮಂದಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಕೆಲವರನ್ನು ಹೋಂ ಐಸೋಲೇಷನ್ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ವಿವರಿಸಿದೆ.
ಸೆಪ್ಟೆಂಬರ್ 8ರವರೆಗೆ 5,18,04,677 ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 11,54,549 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.