ನವದೆಹಲಿ: ಜಾಗತಿಕ ಮಹಾಮಾರಿ ಕೊರೊನಾ ದೇಶದಲ್ಲಿ ಒಂದು ಲಕ್ಷ ಜನರನ್ನು ಬಲಿ ತೆಗೆದುಕೊಂಡಿದೆ. ಕೊರೊನಾ ಪ್ರಕರಣಗಳ ಸಂಖ್ಯೆ 64 ಲಕ್ಷ ಗಡಿ ದಾಟಿದ್ದು, ಇವರಲ್ಲಿ ಶೇ. 83.70ರಷ್ಟು ರೋಗಿಗಳು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ವಿಶ್ವದ ಕೋವಿಡ್ ಪೀಡಿತ ರಾಷ್ಟ್ರಗಳ ಪೈಕಿ ಪ್ರಕರಣಗಳ ಸಂಖ್ಯೆಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದ್ದರೂ ಸಾವಿನ ಪ್ರಮಾಣದಲ್ಲಿ 3ನೇ ಹಾಗೂ ಚೇತರಿಕೆಯ ಪ್ರಮಾಣದಲ್ಲಿ ಅಗ್ರಸ್ಥಾನದಲ್ಲಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 79,476 ಹೊಸ ಸೋಂಕಿತರು ಪತ್ತೆಯಾಗಿದ್ದು, 1,069 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 64,73,545 ಹಾಗೂ ಮೃತರ ಸಂಖ್ಯೆ 1,00,842ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 54,27,707 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 9,44,996 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಅಕ್ಟೋಬರ್ 2ರವರೆಗೆ 7,78,50,403 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 11,32,675 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.