ಶ್ರೀನಗರ (ಜಮ್ಮು ಕಾಶ್ಮೀರ): ಸಂಸದ ಹಾಗೂ ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಜಮ್ಮು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್ (ಜೆಕೆಸಿಎ) ಹಗರಣದ ವಿಚಾರಣೆಗೆ ಜಾರಿ ನಿರ್ದೇಶನಾಲಯದ ಕಚೇರಿಗೆ ಫಾರೂಕ್ ಅಬ್ದುಲ್ಲಾ ಅವರನ್ನು ಕರೆಸಿಕೊಂಡಿದ್ದು, ಅಧಿಕಾರಿಗಳು ಕೆಲವೊಂದು ವಿಚಾರಗಳ ಬಗ್ಗೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿಯನ್ನು ಪ್ರಶ್ನಿಸಿದ್ದಾರೆ.
ಫಾರೂಕ್ ಅಬ್ದುಲ್ಲಾ ಜಮ್ಮು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್ನ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ 43 ಕೋಟಿ ರೂಪಾಯಿಯ ದುರ್ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.
ಸೋಮವಾರ ಅಬ್ದುಲ್ಲಾ ಅವರ ಬ್ಯಾಂಕ್ ದಾಖಲೆಗಳ ಆಧಾರದಲ್ಲಿ ಈಗ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು, 2019ರಿಂದ ವಿಚಾರಣೆ ನಡೆಯುತ್ತಿದೆ.
ಜಾರಿ ನಿರ್ದೇಶನಾಲಯ ಫಾರೂಕ್ ಪುತ್ರ ಓಮರ್ ಅಬ್ದುಲ್ಲಾಗೂ ಕೂಡಾ ಸಮನ್ಸ್ ನೀಡಿದೆ. ಈ ವಿಚಾರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಶೀಘ್ರವಾಗಿ ಜಾರಿ ನಿರ್ದೇಶನಾಲಯದ ಸಮನ್ಸ್ಗಳಿಗೆ ಪ್ರತಿಕ್ರಿಯೆ ನೀಡುತ್ತದೆ ಎಂದು ಓಮರ್ ಅಬ್ದುಲ್ಲಾ ತಿಳಿಸಿದ್ದಾರೆ. ಇದರ ಜೊತೆಗೆ ಇ.ಡಿ ವಿಚಾರಣೆ ರಾಜಕೀಯ ಕುತಂತ್ರ ಅಲ್ಲದೇ ಬೇರೇನೂ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.