ತಿರುವನಂತಪುರಂ(ಕೇರಳ): ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆದಿದ್ದ ಹಿಂಸಾತ್ಮಕ ಪ್ರತಿಭಟನೆ ವೇಳೆ ಸಂಕಷ್ಟಕ್ಕೆ ಸಿಲುಕಿದ್ದ ಕೇರಳದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆದೊಯ್ಯಲು ಕೇರಳ ಸರ್ಕಾರ ಸಾರಿಗೆ ವ್ಯವಸ್ಥೆ ಮಾಡಿದೆ.
ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮರಳಿ ಕರೆತರಲು ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ ಬಸ್‌ಗಳನ್ನು ಮಂಗಳೂರಿಗೆ ಕಳುಹಿಸಿದೆ. ಅಲ್ಲದೆ, ಈ ಬಗ್ಗೆ ಕೇರಳ ಸರ್ಕಾರ ಕರ್ನಾಟಕ ಸರ್ಕಾರದೊಂದಿಗೆ ಸಂಪರ್ಕದಲ್ಲಿದೆ ಎಂದು ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸೂಚನೆಯ ಮೇರೆಗೆ ರಾಜ್ಯದ ಹಿರಿಯ ಸರ್ಕಾರಿ ಅಧಿಕಾರಿಗಳು ಕರ್ನಾಟಕ ಪೊಲೀಸ್ ಮುಖ್ಯಸ್ಥರು ಸೇರಿದಂತೆ ಹಲವು ಅಧಿಕಾರಿಗಳು ಕರ್ನಾಟಕದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.
ಸಿಎಎ ವಿರುದ್ಧ ಗುರುವಾರ ಮಂಗಳೂರಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆದಿತ್ತು. ಆ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಇದೇ ಸಂದರ್ಭದಲ್ಲಿ ಇಬ್ಬರು ಸಾವನ್ನಪ್ಪಿದ್ದರು.