ಕೊಚ್ಚಿ: ಎದೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ.
ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್‌ನ ಕೇಂದ್ರ ಕಾರಾಗೃಹದಲ್ಲಿದ್ದ ಸ್ವಪ್ನಾಗೆ ನಿನ್ನೆ ಎದೆನೋವು ಕಾಣಿಸಿಕೊಂಡಿದ್ದು, ತ್ರಿಶೂರ್‌ನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ (ಜಿಎಂಸಿ)ದಾಖಲಿಸಲಾಗಿತ್ತು. ಇಸಿಜಿ ವರದಿಯಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ಇದೀಗ ಅವರನ್ನು ಐಸಿಯುಗೆ ಶಿಫ್ಟ್ ಮಾಡಲಾಗಿದೆ.
ಚಿನ್ನದ ಕಳ್ಳಸಾಗಣೆ ಪ್ರಕರಣದ ಮೂವರು ಪ್ರಮುಖ ಆರೋಪಿಗಳಾದ ಸ್ವಪ್ನಾ ಸುರೇಶ್, ಸರಿತ್ ಪಿ.ಎಸ್. ಮತ್ತು ಸಂದೀಪ್ ನಾಯರ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಕೊಚ್ಚಿಯ ಮನಿ ಲಾಂಡರಿಂಗ್ ತಡೆ ಕಾಯ್ದೆ(ಪಿಎಂಎಲ್‌ಎ) ಕೋರ್ಟ್ ಸೆಪ್ಟೆಂಬರ್ 9ರವರೆಗೆ ವಿಸ್ತರಿಸಿತ್ತು.