ಶಿಮ್ಲಾ(ಹಿಮಾಚಲ ಪ್ರದೇಶ): ಪೂರ್ವ ಲಡಾಖ್ನ ಗಾಲ್ವನ್ ಕಣಿವೆಯಲ್ಲಿ ಭಾರತ - ಚೀನಾ ಸಂಘರ್ಷ ತಾರಕಕ್ಕೆ ಏರಿರುವ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ಅಲ್ಲಿನ ಸರ್ಕಾರ ಹೈ ಅಲರ್ಟ್ ಘೋಷಣೆ ಮಾಡಿದೆ.
ಹಿಮಾಚಲ ಪ್ರದೇಶದ ಲೈನ್ ಆಫ್ ಆಕ್ಚುವಲ್ ಕಂಟ್ರೋಲ್ ಬಳಿಯಿರುವ ಪ್ರದೇಶಗಳಾದ ಕಿನ್ನೌರ್, ಲಾಹೌಲ್ - ಸ್ಪಿತಿ ಜಿಲ್ಲೆಗಳಲ್ಲಿ ಜನರ ಸುರಕ್ಷತೆ ದೃಷ್ಟಿಯಿಂದ ಹೈ - ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಸಂಬಂಧ ಎಲ್ಲ ಇಂಟೆಲಿಜೆನ್ಸ್ ಏಜೆನ್ಸಿಗಳನ್ನು ಅಲರ್ಟ್ ಮಾಡಲಾಗಿದೆ ಎಂದು ಹಿಮಾಚಲ ಪ್ರದೇಶ ರಾಜ್ಯದ ಪೊಲೀಸ್ ವಕ್ತಾರ ಕುಶಾಲ್ ಶರ್ಮ ಅಭಿಪ್ರಾಯಪಟ್ಟಿದ್ದಾರೆ.
ಚೀನಾ ಮತ್ತು ಭಾರತದ ಸಂಘರ್ಷದಿಂದ ಗಡಿಗೆ ಸಮೀಪದಲ್ಲಿರುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇಂಟೆಲಿಜೆನ್ಸ್ನಿಂದ ಮಾಹಿತಿ ಪಡೆದುಕೊಂಡು ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಕುಶಾಲ್ ಶರ್ಮ ಸ್ಪಷ್ಟಪಡಿಸಿದ್ದಾರೆ.
ಲೈನ್ ಆಫ್ ಕಂಟ್ರೋಲ್ಗೆ ಅಂಟಿಕೊಂಡಂತೆ ಕಿನ್ನೌರ್ ಜಿಲ್ಲೆಯಲ್ಲಿ ಸುಮಾರು 14 ಗ್ರಾಮಗಳಿದ್ದು, ಸ್ಥಳೀಯರಿಗೆ ಗಡಿಭಾಗಗಳಿಗೆ ತೆರಳದಂತೆ ಸೂಚನೆ ನೀಡಲಾಗಿದೆ. ಈ ಗ್ರಾಮಗಳಲ್ಲಿ ಸೇನಾ ವಾಹನಗಳು ಕೆಲವೊಂದು ಕ್ರಮಗಳನ್ನು ಕೈಗೊಳ್ಳುತ್ತಿವೆ ಎಂದು ಈಟಿವಿ ಭಾರತಕ್ಕೆ ಉನ್ನತ ಮೂಲಗಳು ಮಾಹಿತಿ ನೀಡಿವೆ.