ಹಾರ್ಡೋಯ್(ಉತ್ತರ ಪ್ರದೇಶ): ವ್ಯಕ್ತಿಯೊಬ್ಬನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ ಪರಿಣಾಮ ಇಲ್ಲಿನ ಅಟ್ರೌಲಿ ಪೊಲೀಸ್ ಠಾಣೆಯ ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
30 ವರ್ಷದ ಅಶೋಕ್ ಎಂಬ ವ್ಯಕ್ತಿಯ ಮೃತದೇಹವು ಉತ್ತರ ಪ್ರದೇಶದ ಹಾರ್ಡೊಯ್‌ನ ತೋಟವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯ ನಂತರ ಪೊಲೀಸರು ಶವವನ್ನು ಗ್ರಾಮಸ್ಥರಿಗೆ ಹಸ್ತಾಂತರಿಸಿದ್ದಾರೆ.
ಮೃತನ ಕುಟುಂಬ ಶವವನ್ನು ದಹನ ಮಾಡಲು ನಿರಾಕರಿಸಿ, ಪೊಲೀಸರ ಮೇಲೆ ಕೊಲೆ ಆರೋಪ ಹೊರಿಸಿದೆ. ಸಮಸ್ಯೆ ಪರಿಹರಿಸಲು ಪೊಲೀಸರು ಸ್ಥಳಕ್ಕೆ ತಲುಪಿದಾಗ, ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಪೊಲೀಸರು 150ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದ್ದಾರೆ.
"ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉದ್ವಿಗ್ನ ಪರಿಸ್ಥಿತಿಯನ್ನು ಹತೋಟಿಗೆ ತರಲು ಮತ್ತು ಶವ ಸಂಸ್ಕಾರಕ್ಕೆ ಸಹಾಯ ಮಾಡಲು ಪೊಲೀಸ್ ಪಡೆ ಗ್ರಾಮಕ್ಕೆ ಹೋಗಿತ್ತು. ಆದರೆ ಗ್ರಾಮಸ್ಥರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು, ಇದರಲ್ಲಿ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ" ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪೂರ್ವಿ ತಿಳಿಸಿದ್ದಾರೆ.