ಕೋಲ್ಕತಾ: ರಾಜ್ಯದ ಪ್ರತಿಯೊಬ್ಬರಿಗೂ ಉಚಿತವಾಗಿ ಕೋವಿಡ್-19 ಲಸಿಕೆಯನ್ನು ನೀಡಲಾಗುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಮಮತಾ, ನಮ್ಮ ಸರ್ಕಾರವು ರಾಜ್ಯದ ಎಲ್ಲ ಜನರಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಘೋಷಿಸಲು ನನಗೆ ಸಂತೋಷವಾಗುತ್ತಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಕೇರಳ, ತಮಿಳುನಾಡು ಮತ್ತು ಮಧ್ಯಪ್ರದೇಶ ಸೇರಿದಂತೆ ಹಲವಾರು ರಾಜ್ಯಗಳು ಪ್ರತಿಯೊಬ್ಬ ನಾಗರಿಕರಿಗೂ ಉಚಿತವಾಗಿ ಲಸಿಕೆ ನೀಡುವುದಾಗಿ ಘೋಷಿಸಿವೆ. ಜನವರಿ 16 ರಿಂದ ದೇಶದಲ್ಲಿ ಕೋವಿಡ್ -19 ಲಸಿಕೆ ನೀಡುವುದು ಪ್ರಾರಂಭವಾಗಲಿದೆ ಎಂದು ಕೇಂದ್ರ ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನು ಕೊರೊನಾ ಲಸಿಕೆ ವಿತರಿಸುವ ಬಗ್ಗೆ ಸನ್ನದ್ಧವಾಗಿರುವ ಕ್ರಮಗಳ ಕುರಿತು ಪರಿಶೀಲಿಸಲು ಕೇಂದ್ರ ಸರ್ಕಾರ ಸೂಚಿಸಿದ ಹಿನ್ನೆಲೆ ದೇಶದ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೊನಾ ಲಸಿಕೆ ಡ್ರೈ ರನ್ ನಡೆಸಲಾಗಿದೆ.