ಉತ್ತರಪ್ರದೇಶ : ದೆಹಲಿಯಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಗಳ ಬಗ್ಗೆ ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿಯವರು ಇಂದು ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ.
ದೆಹಲಿಯಲ್ಲಿ ಸಂಭವಿಸಿದ ಈ ಹಿಂಸಾಚಾರ 1984ರಲ್ಲಿ ನಡೆದ ಸಿಖ್ ವಿರೋಧಿ ಗಲಭೆ ಮೆಲುಕು ಹಾಕಿದೆ. ಈ ಘಟನೆ ಅತ್ಯಂತ ಗಂಭೀರ ಮತ್ತು ದುರಾದೃಷ್ಟಕರ ಎಂದು ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ. ಜೊತೆಗೆ ಘಟನೆ ಕುರಿತು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಿಂದ ಉನ್ನತ ಮಟ್ಟದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಇಂತಹ ಘಟನೆಗಳು ರಾಷ್ಟ್ರದಲ್ಲಿ ನಕಾರಾತ್ಮಕ ಪರಿಣಾಮ ಬೀರಲಿವೆ. ದೇಶದ ಪ್ರತಿಷ್ಠೆಗೆ ಧಕ್ಕೆ ತರುವ ಕೆಲಸವನ್ನು ಯಾರೂ ಮಾಡಬಾರದು. ಅರಾಜಕತೆ ಮತ್ತು ಹಿಂಸಾಚಾರಕ್ಕೆ ಕಾರಣವಾಗುವ ಕೆಲಸ ಮಾಡುವವರ ವಿರುದ್ಧ ಆಡಳಿತ ಪಕ್ಷ ಮತ್ತು ಸರ್ಕಾರ ವಿಶೇಷ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈಶಾನ್ಯ ದೆಹಲಿ ಪ್ರದೇಶಗಳಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ 39 ಮಂದಿ ಸಾವನ್ನಪ್ಪಿದ್ದಾರೆ ಮತ್ತು 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬಿಜೆಪಿ ಸರ್ಕಾರವು ಕಾನೂನು ಮತ್ತು ಸಾಂವಿಧಾನಿಕ ಕರ್ತವ್ಯ ಪೂರೈಸುವಲ್ಲಿ ವಿಫಲವಾಗಿದೆ. ದೇಶದಲ್ಲಿ ಬಡತನ, ನಿರುದ್ಯೋಗ, ಹಣದುಬ್ಬರ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.
ಈ ಗಲಭೆ ದೆಹಲಿ ಪೊಲೀಸ್ ಮತ್ತು ಆಡಳಿತದ ವ್ಯವಸ್ಥೆಯ ನಿರ್ಲಕ್ಷ್ಯ ಮತ್ತು ವೈಫಲ್ಯ ಎತ್ತಿತೋರುತ್ತಿದೆ. ಸಂತ್ರಸ್ತರಿಗೆ ಸೂಕ್ತ ಪರಿಹಾರ ಮತ್ತು ನೆರವು ನೀಡುವಂತೆ ದೆಹಲಿ ಮತ್ತು ಕೇಂದ್ರ ಸರ್ಕಾರಗಳಿಗೆ ನಿರ್ದೇಶನ ನೀಡುವಂತೆ ಮಾಜಿ ಸಿಎಂ ಮಾಯಾವತಿ ಅವರು ರಾಷ್ಟ್ರಪತಿಯವರಲ್ಲಿ ಮನವಿ ಮಾಡಿದ್ದಾರೆ.