ನವದೆಹಲಿ: ಎಲ್ಲ ವಯೋಮಾನದ ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಅವಕಾಶ ನೀಡಬೇಕೆನ್ನುವ ಸುಪ್ರೀಂಕೋರ್ಟ್ ತೀರ್ಪಿನ ಮರುಪರಿಶೀಲನೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ನಾಳೆಯಿಂದ ಸುಪ್ರೀಂಕೋರ್ಟ್ನ 9 ನ್ಯಾಯಮೂರ್ತಿಗಳನ್ನೊಳಗೊಂಡ ಪೀಠವು ನಡೆಸಲಿದೆ.
ಇದರ ಜೊತೆಗೆ ಮುಸ್ಲಿಂ ಮತ್ತು ಪಾರ್ಸಿ ಮಹಿಳೆಯರ ವಿರುದ್ಧ ತಾರತಮ್ಯ ಸೇರಿ ಇತರ ವಿವಾದಾತ್ಮಕ ವಿಷಯಗಳ ಕುರಿತೂ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ. ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಆರ್ ಬಾನುಮತಿ, ಅಶೋಕ್ ಭೂಷಣ್, ಎಲ್ ನಾಗೇಶ್ವರ ರಾವ್, ಎಂ ಎಂ ಶಾಂತನಗೌಡರ್, ಎಸ್ ಎ ನಜೀರ್, ಆರ್ ಸುಭಾಷ್ ರೆಡ್ಡಿ, ಬಿ ಆರ್ ಗವಾಯಿ ಮತ್ತು ಸೂರ್ಯ ಕಾಂತ್, 60 ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ.
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಅವಕಾಶ ನೀಡಬೇಕು ಎಂದು 2018ರಲ್ಲಿ ಆಗಿನ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ತೀರ್ಪು ನೀಡಿತ್ತು. ಪೂಜಾ ಸ್ಥಳಗಳಿಗೆ ಮಹಿಳೆಯರ ಪ್ರವೇಶ ಕೇವಲ ಹಿಂದೂಗಳ ದೇವಾಲಯಕ್ಕಷ್ಟೇ ಸೀಮಿತವಾಗಿಲ್ಲ. ಇದು ಎಲ್ಲಾ ಮಸೀದಿಗಳಿಗೆ ಮಹಿಳೆಯರ ಪ್ರವೇಶಕ್ಕೂ ಅನ್ವಯಿಸುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿತ್ತು.
ಆದರೆ, ಈ ತೀರ್ಪಿನ ಬಗ್ಗೆ ದೇಶಾದ್ಯಂತ ಪರ-ವಿರೋಧದ ಚರ್ಚೆಯಾಗಿತ್ತು. ತೀರ್ಪಿನ ಮರು ಪರಿಶೀಲನೆ ನಡೆಸಬೇಕು ಎಂದು ಕೋರ್ಟ್ಗೆ ಸಾಕಷ್ಟು ಅರ್ಜಿಗಳು ಬಂದಿದ್ದವು. ಮರುಪರಿಶೀಲನಾ ಅರ್ಜಿಯನ್ನು ಅಂಗೀಕರಿಸಿದ ಕೋರ್ಟ್, ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿತ್ತು. ಇದೀಗ ಜ.13 ರಿಂದ ಈ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ನ 9 ನ್ಯಾಯಮೂರ್ತಿಗಳನ್ನೊಳಗೊಂಡ ಪೀಠವು ನಡೆಸಲಿದೆ.