ದುಮ್ಕಾ: ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ನಾಲ್ವರು ನಕ್ಸಲರು ಗಾಯಗೊಂಡಿರುವ ಘಟನೆ ಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ.
ದುಮ್ಕಾದ ಕತಾಲಿಯಾ ಗ್ರಾಮದ ಅರಣ್ಯಪ್ರದೇಶದಲ್ಲಿ ಯೋಧರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ನಕ್ಸಲರ ದಾಳಿಗೆ ಎಸ್ಎಸ್ಬಿ ಯೋಧ ನೀರಜ್ ಛತ್ರಿ ತೀವ್ರವಾಗಿ ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸೇನಾ ಹೆಲಿಕ್ಯಾಪ್ಟರ್ ಮೂಲಕ ರಾಂಚಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಅವರು ಹುತಾತ್ಮರಾದರು ಎಂದು ಸೇನಾ ಮೂಲಗಳು ತಿಳಿಸಿವೆ.
ಘಟನೆಯಲ್ಲಿ ನಾಲ್ವರು ನಕ್ಸಲರೂ ಗಾಯಗೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವೈ.ಎಸ್. ರಮೇಶ್ ಹೇಳಿದ್ದಾರೆ.
ಶಿಕಾರಿಪದ ಹಾಗೂ ರಾಣೇಶ್ವರ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ 15-20 ನಕ್ಸಲರು ಅಡಗಿ ಕುಳಿತಿದ್ದಾರೆ ಎಂಬ ಮಾಹಿತಿ ಮೇರೆಗೆ ಎಸ್ಎಸ್ಬಿ ಹಾಗೂ ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದರು. ಅರಣ್ಯ ಪ್ರದೇಶ ಪ್ರವೇಶಿಸುತ್ತಿದ್ದಂತೆ ನಕ್ಸಲರು ಗುಂಡಿನ ದಾಳಿ ನಡೆಸಿದ್ದು, ಭದ್ರತಾಪಡೆ ಯೋಧರು ಕೂಡ ತಕ್ಕ ಪ್ರತ್ಯುತ್ತರ ನೀಡಿದ್ದಾರೆ.