ನವದೆಹಲಿ: ಅಪ್ರಾಪ್ತ ವಯಸ್ಕರನ್ನೂ ಒಳಗೊಂಡಂತೆ ಅತ್ಯಾಚಾರ ಪ್ರಕರಣಗಳ ತ್ವರಿತ ವಿಚಾರಣೆ ಹಾಗೂ ವಿಲೇವಾರಿಗಾಗಿ 1,023 ತ್ವರಿತಗತಿ ವಿಶೇಷ ನ್ಯಾಯಾಲಯಗಳನ್ನು (FTSCs) ಸ್ಥಾಪಿಸುವ ಯೋಜನೆಯನ್ನು ರೂಪಿಸಲಾಗಿದೆ ಎಂದು ಕೇಂದ್ರ ಸರ್ಕಾರ ಇಂದು ಸಂಸತ್ತಿನಲ್ಲಿ ತಿಳಿಸಿದೆ.
ಈ ಯೋಜನೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ 767.25 ಕೋಟಿ ರೂ. ವೆಚ್ಚ ತಗುಲಲಿದೆ. ಈ ಯೋಜನೆಯಡಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ 474 ಕೋಟಿ ರೂ. ನೀಡಲಿದೆ ಎಂದು ಲಿಖಿತ ರೂಪದಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ.
ಅತ್ಯಾಚಾರ ಪ್ರಕರಣಗಳು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಬರುವ ಪ್ರಕರಣಗಳ ತ್ವರಿತ ವಿಚಾರಣೆ ಮತ್ತು ವಿಲೇವಾರಿಗಾಗಿ ಇತರ ಕೇಂದ್ರೀಯ ಪ್ರಾಯೋಜಿತ ಯೋಜನೆಗಳ ಮಾದರಿಯಲ್ಲೇ ಒಟ್ಟು 1,023 ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲು ನ್ಯಾಯಾಂಗ ಇಲಾಖೆ, ಕಾನೂನು ಮತ್ತು ನ್ಯಾಯ ಸಚಿವಾಲಯ ಹಾಗೂ ಭಾರತ ಸರ್ಕಾರ ಸೇರಿ ಯೋಜನೆಯನ್ನು ರೂಪಿಸಿದೆ ಎಂದು ಪಿಐಬಿ ಪ್ರಕಟಣೆ ತಿಳಿಸಿದೆ.
ಉತ್ತರ ಪ್ರದೇಶದಲ್ಲೇ 218 ಫಾಸ್ಟ್ ಟ್ರ್ಯಾಕ್ ಕೋರ್ಟ್ಗಳನ್ನ ಸ್ಥಾಪಿಸಲು ಪ್ರಸ್ತಾಪಿಸಲಾಗಿದ್ದು, ಉತ್ತರ ಪ್ರದೇಶ ಸರ್ಕಾರದ ನಿರ್ಧಾರಕ್ಕಾಗಿ ಕಾಯಬೇಕಿದೆ ಎಂದು ಪಿಐಬಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.