ಬಾರ್ಮರ್ (ರಾಜಸ್ಥಾನ): ಭಾರತೀಯ ಸೇನೆಗೆ ಸಂಬಂಧಿಸಿದ ಸೂಕ್ಷ್ಮ, ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಕಳುಹಿಸಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ರಾಜಸ್ಥಾನ ಪೊಲೀಸ್ ಮತ್ತು ಸಿಐಡಿ-ಸಿಬಿಯ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ.
ಬಂಧಿತ ಆರೋಪಿ ಗಡಿ ಪ್ರದೇಶದಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಐಎಸ್‌ಐ (ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್)ಗೆ ಮಾಹಿತಿ ರವಾನಿಸಿರುವುದು ತಿಳಿದು ಬಂದಿದೆ. ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಈತನನ್ನು ಅರೆಸ್ಟ್ ಮಾಡಲಾಗಿದ್ದು, ಜೈಪುರಕ್ಕೆ ಕರೆದೊಯ್ಯಲಾಗಿದೆ.
ಈ ಹಿಂದೆ ಪಾಕಿಸ್ತಾನ ಪರ ಬೇಹುಗಾರಿಕೆ ಆರೋಪದಡಿ ಅಂತಾರಾಷ್ಟ್ರೀಯ ಗಡಿ ಪ್ರದೇಶವಾದ ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಲ್ಲಿ ನವಾಬ್ ಖಾನ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಈತ 'ಕೋಡೆಡ್' ರೂಪದಲ್ಲಿ ಶತ್ರು ರಾಷ್ಟ್ರಕ್ಕೆ ಮಾಹಿತಿ ಕಳುಹಿಸುತ್ತಿದ್ದನಂತೆ.
ಇತ್ತೀಚಿನ ದಿನಗಳಲ್ಲಿ ಭಾರತೀಯ ಸೈನ್ಯಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿಗಳನ್ನು ಶತ್ರು ಪಡೆಗಳಿಗೆ ಕಳುಹಿಸಲು ಸೋಷಿಯಲ್ ಮೀಡಿಯಾ ಅತಿ ದೊಡ್ಡ ಅಸ್ತ್ರವಾಗಿ ಬಳಕೆಯಾಗುತ್ತಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.