ನವದೆಹಲಿ: ಕೇಂದ್ರೀಯ ವಿದ್ಯಾಲಯಗಳು ಮತ್ತು ಜವಾಹರ್ ನವೋದಯ ವಿದ್ಯಾಲಯಗಳಲ್ಲಿ ಪ್ರವೇಶ ಪಡೆಯುವ ಒಬಿಸಿ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡದಿರುವುದಕ್ಕೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸಂಸದೀಯ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.
ಕೇಂದ್ರೀಯ ವಿದ್ಯಾಲಯಗಳು ಮತ್ತು ನವೋದಯ ವಿದ್ಯಾಲಯಗಳಿಗೆ ಪ್ರವೇಶ ಪಡೆಯುವ ಎಸ್‌ಸಿ/ ಎಸ್‌ಟಿ ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಮೀಸಲಾತಿ, ಇಲ್ಲಿಯವರೆಗೆ ಒಬಿಸಿ ವಿದ್ಯಾರ್ಥಿಗಳಿಗೆ ಇಲ್ಲದಿರುವುದನ್ನು ಸಮಿತಿ ಗಮನಿಸುತ್ತಿದೆ ಎಂದು ಬಿಜೆಪಿ ಸಂಸದ ರಮೇಶ್ ಬಿಧುರಿ ಅವರ ಅಧ್ಯಕ್ಷತೆಯ ಲೋಕಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿ ತಿಳಿಸಿದೆ.
ಕೇಂದ್ರೀಯ ವಿದ್ಯಾಲಯ ಸಂಘಟನ್ (ಕೆವಿಎಸ್) ಮತ್ತು ನವೋದಯ ವಿದ್ಯಾಲಯ ಸಮಿತಿ (ಎನ್‌ವಿಎಸ್) ಪ್ರವೇಶ ನೀತಿ ಮಾರ್ಗಸೂಚಿಗಳಲ್ಲಿರುವ ನಿಬಂಧನೆಗಳ ಪ್ರಕಾರ, ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಪ್ರವೇಶದಲ್ಲಿ ಮೀಸಲಾತಿ ವಿಸ್ತರಿಸಲಾಗುತ್ತಿದೆ ಎಂದು ಸಚಿವಾಲಯವು ಸಮಿತಿಗೆ ತಿಳಿಸಿದೆ.
ಆದರೆ, ಮುಂದಿನ ಮೂರು ತಿಂಗಳಲ್ಲಿ ಕೇಂದ್ರೀಯ ವಿದ್ಯಾಲಯ ಮತ್ತು ನವೋದಯ ವಿದ್ಯಾಲಯಗಳಿಗೆ ಪ್ರವೇಶ ಪಡೆಯುವ ಒಬಿಸಿ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಬೇಕು ಎಂದು ತಮಿತಿ ಬಲವಾಗಿ ಶಿಫಾರಸು ಮಾಡಿದೆ. ಮುಂಬರುವ ಶೈಕ್ಷಣಿಕ ವರ್ಷದಿಂದಲೇ ಈ ಮೀಸಲಾತಿ ವಿದ್ಯಾರ್ಥಿಗಳಿಗೆ ಸಿಗಬೇಕು ಎಂದು ಸಮಿತಿ ಹೇಳಿದೆ. ಅಲ್ಲದೆ ಸೈನಿಕ ಶಾಲೆ ಮತ್ತು ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲೂ ಮೀಸಲಾತಿ ಇಲ್ಲದಿರುವ ಬಗ್ಗೆ ಸಮಿತಿ ಕಳವಳ ವ್ಯಕ್ತಪಡಿಸಿದೆ. ಈ ಎಲ್ಲಾ ಶಾಲೆಗಳಲ್ಲಿ ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾತಿ ಸೌಲಭ್ಯಗಳನ್ನು ವಿಸ್ತರಿಸದಿರಲು ಕಾರಣಗಳೇನು ಎಂದು ಅರ್ಥವಾಗುತ್ತಿಲ್ಲ ಎಂದು ಸಮಿತಿ ಹೇಳಿದೆ.