ಪಶ್ಚಿಮ ಗೋದಾವರಿ (ಆಂಧ್ರಪ್ರದೇಶ): ಅನುಮಾನಾಸ್ಪದ ರೀತಿಯಲ್ಲಿ ಇದ್ದಕ್ಕಿದ್ದಂತೆ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಎಲೂರು ಪಟ್ಟಣದಲ್ಲಿ ಸುಮಾರು 300 ಮಂದಿ ಅಸ್ವಸ್ಥರಾಗಿದ್ದಾರೆ.
ನಿನ್ನೆಯಿಂದ ಜನರು ಮೂರ್ಛೆ ತಪ್ಪಿ ಬೀಳುತ್ತಿದ್ದು, ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. 227 ಮಂದಿಗೆ ಸರ್ಕಾರಿ ಆಸ್ಪತ್ರೆಯಲ್ಲಿ, 70 ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐವರ ಸ್ಥಿತಿ ಗಂಭೀರವಾಗಿದ್ದು, ವಿಜಯವಾಡದ ಸರ್ಕಾರಿ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಗಿದೆ.
ಈ ವಿಚಿತ್ರ ಕಾಯಿಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಂಧ್ರದ ಆರೋಗ್ಯ ಸಚಿವ ಅಲ್ಲಾ ನಾನಿ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದು, ಎಲೂರು ಪಟ್ಟಣದ ಆಯಾ ಪ್ರದೇಶಗಳಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.