ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದಿರುವ 20 ವರ್ಷದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನ ಸಿಬಿಐಗೆ ವಹಿಸುವಂತೆ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡಲಾಗಿದೆ.
ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಲಾಗಿದ್ದು, ಪ್ರಕರಣವನ್ನ ಸುಪ್ರೀಂಕೋರ್ಟ್ ಅಥವಾ ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶರ ಅಡಿ ತನಿಖೆ ನಡೆಸುವಂತೆ ಕೋರಲಾಗಿದೆ. ಯುವತಿ ಮೇಲೆ ನಾಲ್ವರು ಕಾಮುಕರು ಅತ್ಯಾಚಾರ ನಡೆಸಿದ್ದು, ಸಾಮಾಜಿಕ ಕಾರ್ಯಕರ್ತೆ ಸತ್ಯಮಾ ದುಬೆ, ವಕೀಲರಾದ ವಿಶಾಲ್ ಠಾಕ್ರೆ ಮತ್ತು ರುದ್ರ ಪ್ರತಾಪ್ ಯಾದವ್ ಜಂಟಿಯಾಗಿ ಪಿಐಎಲ್ ದಾಖಲು ಮಾಡಿದ್ದಾರೆ.
ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಸಾವನ್ನಪ್ಪಿದ್ದು, ಆಕೆಯ ಮೃತದೇಹವನ್ನ ಬುಧವಾರ ರಾತ್ರಿ ಕುಟುಂಬಸ್ಥರ ಒಪ್ಪಿಗೆಯಿಲ್ಲದೇ ಪೊಲೀಸರು ಬಲವಂತವಾಗಿ ಅಂತ್ಯಕ್ರಿಯೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಅರ್ಜಿಯಲ್ಲಿ ಅಧಿಕಾರಿಗಳು ಸಂತ್ರಸ್ತೆ ವಿಚಾರದಲ್ಲಿ ಸರಿಯಾಗಿ ಕರ್ತವ್ಯ ನಿರ್ವಹಿಸಿಲ್ಲ. ಹಾಗೂ ಆರೋಪಿಗಳ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಅತ್ಯಾಚಾರವೆಸಗಿರುವ ವ್ಯಕ್ತಿಗಳು ಮೇಲ್ಜಾತಿಯವರಾಗಿರುವ ಕಾರಣ ಸಮಯಕ್ಕೆ ಸರಿಯಾಗಿ ಅಧಿಕಾರಿಗಳು/ ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿದಾರರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಉತ್ತರಪ್ರದೇಶ ಸರ್ಕಾರ ಎಸ್ಐಟಿ ರಚನೆ ಮಾಡಿದ್ದು, ಮುಂದಿನ ಏಳು ದಿನಗಳಲ್ಲಿ ವರದಿ ಸಲ್ಲಿಕೆ ಮಾಡುವಂತೆ ತಿಳಿಸಿದೆ.