ವಿಜಯವಾಡ: ಅಮರಾವತಿಯನ್ನು ಆಂಧ್ರ ಪ್ರದೇಶದ ರಾಜಧಾನಿಯಾಗಿ ಮುಂದುವರೆಸಬೇಕು ಎಂಬ ರೈತರ ಹೋರಾಟಕ್ಕೆ ಬೆಂಬಲವಾಗಿ ಬಸ್ ಯಾತ್ರೆ ಹಮ್ಮಿಕೊಂಡಿದ್ದ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಸ್ ಯಾತ್ರೆ ಆರಂಭವಾಗುತ್ತಿದ್ದಂತೆ ಪೊಲೀಸರು ಚಂದ್ರಬಾಬು ನಾಯ್ಡು ಅವರಿದ್ದ ಬಸ್ಗೆ ತಡೆಯೊಡ್ಡಿದ್ದಾರೆ. ಈ ವೇಳೆ ಪೊಲೀಸರು ಮತ್ತು ಟಿಡಿಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಉಂಟಾಯಿತು. ಭಾರಿ ಪ್ರಮಾಣದಲ್ಲಿ ಪ್ರತಿಭಟನಾಕಾರರು ಸೇರಿದ್ದ ಕಾರಣ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕೆಲಹೊತ್ತು ಪ್ರತಿಭಟನಾಕಾರರನ್ನು ಚದುರಿಸಿದ ಪೊಲೀಸರು ಮಾಜಿ ಸಿಎಂ ಚಂದ್ರಬಾಬು ನಾಯ್ಡು, ಅವರ ಮಗ ಲೋಕೇಶ್ ಸೇರಿದಂತೆ ಹಲವು ಟಿಡಿಪಿ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.
ಈ ಹಿಂದೆ ಅಮರಾವತಿಯನ್ನು ಆಂಧ್ರ ಪ್ರದೇಶದ ರಾಜಧಾನಿಯನ್ನಾಗಿ ಮಾಡಲು ನಿರ್ಧಾರ ಮಾಡಲಾಗಿತ್ತು. ಆದರೆ, ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ವಿಶಾಖಪಟ್ಟಣಂ ಅನ್ನು ಆಂಧ್ರದ ರಾಜಧಾನಿಯಾಗಿ ಮಾಡಲು ತೀರ್ಮಾನಿಸಿದೆ. ಇದನ್ನು ವಿರೋಧಿಸಿ ಅಮರಾವತಿ ಅಭಿವೃದ್ಧಿಗೆ ಭೂಮಿ ನೀಡಿದ್ದ ರೈತರು ಕಳೆದ 23 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.