ನವದೆಹಲಿ: ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧಕ್ಕೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬೆಂಬಲ ನೀಡಿದ್ದು, ಮುಷ್ಕರ ನಿರತರೊಂದಿಗೆ ಭಾಗಿ ಆಗಲಿದ್ದಾರೆ ಎಂದು ಮೂಲಗಳು ಹೇಳುತ್ತಿವೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ- 766ರಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಕರ್ನಾಟಕ ಸರ್ಕಾರ ನಿಷೇಧ ವಿಧಿಸಿದೆ. ವಯನಾಡು ಕ್ಷೇತ್ರದ ಸಂಸದರಾಗಿರುವ ರಾಹುಲ್ ಅವರು ಅಲ್ಲಿನ ಸ್ಥಳೀಯರ ಹಿತಾಸಕ್ತಿಯನ್ನು ಕಾಪಾಡಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರ ಅನುಕೂಲಕ್ಕಾಗಿ ಸಂಚಾರ ನಿಷೇಧ ತೆರವುಗೊಳಿಸುವಂತೆ ಮನವಿ ಮಾಡಿದ್ದಾರೆ.
ರಾಹುಲ್ ಗಾಂಧಿ ಅವರು ದೆಹಲಿಯ ಕೇರಳ ಭವನದಲ್ಲಿ ಸಿಎಂ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವರಿಕೆ ಮಾಡಿದ್ದಾರೆ. ಜೊತೆಗೆ ಕೇರಳದಲ್ಲಿ ಇತ್ತೀಚೆಗೆ ಸಂಭವಿಸಿದ್ದ ಪ್ರವಾಹ ಕುರಿತು ಚರ್ಚಿಸಿದ್ದಾರೆ. ಇದೇ ವೇಳೆ ಕೊಯಿಕ್ಕೋಡ್ ಸಂಸದ ಎಂ.ಕೆ. ರಾಘವನ್ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ವೇಣುಗೋಪಾಲ್ ಅವರೊಂದಿಗೂ ರಾತ್ರಿ ಸಂಚಾರ ನಿಷೇಧ ತೆರವು ಕುರಿತು ಮಾತುಕತೆ ನಡೆಸಿದ್ದಾರೆ. ಬಲ್ಲ ಮೂಲಗಳ ಪ್ರಕಾರ, ಅಕ್ಟೋಬರ್ 3ರಂದು ರಾಹುಲ್ ಗಾಂಧಿ ಕೊಯಿಕ್ಕೋಡ್ ತಲುಪಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.