ಭೋಪಾಲ್: ಮಧ್ಯಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಆರು ಮಕ್ಕಳು ಸಾವನ್ನಪ್ಪಿದ್ದಾರೆ. ಒಂಬತ್ತು ಜಿಲ್ಲೆಗಳ 394 ಗ್ರಾಮಗಳಲ್ಲಿ 6,500 ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಸೇನೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ಹಾನಿಗೊಳಗಾದ ಹೋಶಂಗಾಬಾದ್ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, ಒಂದೇ ದಿನದಲ್ಲಿ 3,500 ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ನರ್ಮದಾ ನದಿಯ ನೀರಿನ ಮಟ್ಟ ಏರಿಕೆಯಿಂದಾಗಿ ಪರಿಸ್ಥಿತಿ ಹದಗೆಡುತ್ತಿದೆ. ಇನ್ನೂ 10,000 ಕ್ಕೂ ಹೆಚ್ಚು ಜನರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚಿಂದ್ವಾರದಲ್ಲಿ ಸಿಲುಕಿಕೊಂಡಿದ್ದ ಐದು ಜನರನ್ನು ವಾಯುಪಡೆಯ ಹೆಲಿಕಾಪ್ಟರ್ ಮೂಲಕ ಸ್ಥಳಾಂತರಿಸಿಸಲಾಗಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಹೋಶಂಗಾಬಾದ್, ಸೆಹೋರ್ ಜಿಲ್ಲೆಗಳು ಮತ್ತು ನರ್ಮದಾ ನದಿಯ ಪ್ರದೇಶದಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ವೈಮಾನಿಕ ಸಮೀಕ್ಷೆ ನಡೆಸಿದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.