ಉದಯ್‌ಪುರ್(ರಾಜಸ್ಥಾನ): ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಪ್ರತಿಟನಾಕಾರಾರು ಪೊಲೀಸರ ಮೇಲೆ ದಾಳಿ ನಡೆಸಿ ಹೋಟೆಲ್ ಅನ್ನು ದರೋಡೆ ಮಾಡಿರುವ ಘಟನೆ ವರದಿಯಾಗಿದೆ.
1,167 ಶಿಕ್ಷಕರ ಹುದ್ದೆಗಳ ಭರ್ತಿಯಲ್ಲಿ ಎಸ್‌ಟಿ ಮೀಸಲಾತಿ ಸೇರಿ ಹಲವು ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಕಳೆದ 19 ದಿನಗಳಿಂದ ಉದಯ್‌ಪುರ್-ದಂಗಾರ್ಪುರ್ ಗಡಿಯಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಆದ್ರೆ ಇಂದು ಪ್ರತಿಭಟನೆ ಏಕಾಏಕಿ ಹಿಂಸಾಚಾರಕ್ಕೆ ತಿರುಗಿದೆ. ಸ್ಥಳದಲ್ಲಿದ್ದ ಪೊಲೀಸರ ಮೇಲೆ ಪ್ರತಿಭಟನಾಕಾರರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಜೊತೆಗೆ ಅತಿಥಿ ಹೋಟೆಲ್‌ಗೆ ಹಾನಿ ಮಾಡಿದ್ದಾರೆ ಎನ್ನಲಾಗಿದೆ.
ಹೋಟೆಲ್‌ನಲ್ಲಿ ಸಿಕ್ಕ ಸಿಕ್ಕ ವಸ್ತುಗಳಿಗೆ ಹಾನಿ ಮಾಡಿರುವುದಲ್ಲದೇ, ಅಲ್ಲಿದ್ದ ವಸ್ತುಗಳನ್ನು ದರೋಡೆ ಮಾಡಿ ಹೋಟೆಲ್‌ಗೆ ಬೆಂಕಿ ಹಚ್ಚಿಸಿದ್ದಾರೆ. ಈ ವೇಳೆ ಮಧ್ಯಪ್ರವೇಸಿದ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಪೊಲೀಸ್ ವಾಹನಗಳಿಗೂ ಬೆಂಕಿ ಹಚ್ಚಿದ ಪ್ರತಿಭಟನಾಕಾರರು ಪುಂಡಾಟ ಪ್ರದರ್ಶಿಸಿದ್ದಾರೆ ಎನ್ನಲಾಗಿದೆ.
ಪ್ರತಿಭಟನಾಕಾರರ ಈ ಕೃತ್ಯದಿಂದ ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಪೊಲೀಸರು ಹಾಗೂ ಕೆಲ ಸ್ಥಳೀಯರಿಗೆ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಪೊಲೀಸರು 700 ಮಂದಿ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.