ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಒಪ್ಪಿದ ದಿನಾಂಕವನ್ನು ಅಂತಿಮಗೊಳಿಸಿ, ಸುಪ್ರೀಂಕೋರ್ಟ್ ಆದೇಶದಂತೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಶೀಘ್ರದಲ್ಲೇ ಪ್ರಾರಂಭವಾಗಲಿದೆ.
ಪ್ರಧಾನಮಂತ್ರಿಗೆ ಆಹ್ವಾನವನ್ನು ಕಳುಹಿಸಲಾಗಿದೆ ಎಂದು ಟ್ರಸ್ಟ್ ಸದಸ್ಯರು ದೃಢಪಡಿಸಿದ್ದು, ನಾಳೆಯ ಸಭೆಯಲ್ಲಿ ದೇವಾಲಯ ನಿರ್ಮಾಣ ಕಾರ್ಯ ಪ್ರಾರಂಭದ ದಿನಾಂಕವನ್ನು ಅಂತಿಮಗೊಳಿಸುವ ಸಾಧ್ಯತೆಗಳಿವೆ.
ಸಭೆಯಲ್ಲಿ ದೇವಾಲಯದ ನಿರ್ಮಾಣ ಸಮಿತಿಯ ಅಧ್ಯಕ್ಷ ತ್ರಿಪೇಂದ್ರ ಮಿಶ್ರಾ ಹಾಜರಾಗಲಿದ್ದಾರೆ. ಅವರು ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸಿ, ಮಂದಿರ ನಿರ್ಮಾಣ ಪ್ರಾರಂಭಿಸುವ ದಿನಾಂಕಕ್ಕೆ ಅನುಮೋದನೆ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೇವಾಲಯ ನಿರ್ಮಾಣ ಕಾರ್ಯ ಪ್ರಾರಂಭದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಉಪಸ್ಥಿತರಿರಲಿದ್ದಾರೆ. ಮೂಲಗಳ ಪ್ರಕಾರ, ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣ ಕಾರ್ಯ ಆಗಸ್ಟ್‌ನಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ.
ದೇವಾಲಯ ನಿರ್ಮಾಣ ಸಮಾರಂಭದಲ್ಲಿ ಅನೇಕ ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ಮತ್ತು ಇತರ ಪ್ರಮುಖ ಗಣ್ಯರು ಪಾಲ್ಗೊಳ್ಳಬೇಕಿತ್ತು. ಆದರೆ, ಕೋವಿಡ್-19ರ ಹಿನ್ನೆಲೆ ಪ್ರಧಾನಿ ಮೋದಿ, ಮೋಹನ್ ಭಾಗವತ್, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಕೆಲವೇ ಮಂತ್ರಿಗಳು ಮಾತ್ರ ಹಾಜರಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.