ನವದೆಹಲಿ/ಬೆಂಗಳೂರು: ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಅನರ್ಹ ಶಾಸಕರ ಅರ್ಜಿ ಇಂದು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬರಲಿದೆ.
ನ್ಯಾಯಮೂರ್ತಿಗಳಾದ ಎನ್.ವಿ ರಮಣ, ಮೋಹನ್ ಶಾಂತನಗೌಡರ, ಅಜಯ್ ರಸ್ತೋಗಿ ನೇತೃತ್ವದ ತ್ರಿಸದಸ್ಯ ನ್ಯಾಯಪೀಠವು ಬೆಳಿಗ್ಗೆ ಅನರ್ಹತೆ ಪ್ರಶ್ನಿಸಿರುವ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲಿದ್ದು ರಾಜ್ಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.
ಹಲವು ಬಾರಿ ಅನರ್ಹ ಶಾಸಕರ ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂಕೋರ್ಟ್ ಇಂದು ವಾದ-ಪ್ರತಿವಾದ ಆಲಿಸಲಿದೆ. ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು. ಇದೇ ಆದೇಶವನ್ನು ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗ್ಯೂ ರಾಜೀನಾಮೆ ಅಂಗೀಕರಿಸದೇ ಕಾಂಗ್ರೆಸ್ ಮತ್ತು ಜೆಡಿಎಸ್ ನೀಡಿದ ದೂರುಗಳನ್ನಾಧರಿಸಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಸುಪ್ರೀಂಕೋರ್ಟ್ನಲ್ಲಿ ಅನರ್ಹ ಶಾಸಕರು ಪ್ರಶ್ನಿಸಿದ್ದಾರೆ.
ಶಾಸಕ ಸ್ಥಾನದಿಂದ ಅನರ್ಹ ಮಾಡಿರುವ ಸ್ಪೀಕರ್ ಆದೇಶ ರದ್ದುಪಡಿಸಬೇಕು ಎನ್ನುವುದು ಅನರ್ಹ ಶಾಸಕರ ಪ್ರಮುಖ ವಾದವಾಗಿದೆ. ಸ್ಪೀಕರ್ ಆದೇಶಕ್ಕೆ ತಡೆಯಾಜ್ಞೆ ನೀಡಬೇಕೆನ್ನುವುದು ಸಹ ಎಲ್ಲ 17 ಅನರ್ಹ ಶಾಸಕರ ಮಧ್ಯಂತರ ಮನವಿಯಾಗಿದೆ.
ಇದಕ್ಕೆ ಪ್ರತಿಯಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗು ಪ್ರತಿವಾದಿಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಪಕ್ಷಾಂತರ ನಿಷೇಧ ಕಾಯ್ದೆಯಡಿ ಶಾಸಕರನ್ನು ಅನರ್ಹಗೊಳಿಸಿರುವ ಕ್ರಮ ಸರಿಯಾಗಿದೆ ಎಂದು ಅನರ್ಹ ಶಾಸಕರ ತಂಡದ ವಿರುದ್ಧ ಪ್ರಬಲ ವಾದ ಮಂಡಿಸಲು ಸಿದ್ಧತೆ ಮಾಡಿಕೊಂಡಿವೆ.
ಸುಪ್ರೀಂಕೋರ್ಟ್ನಲ್ಲಿ ಶಾಸಕರ ಅನರ್ಹತೆ ಪ್ರಕರಣದ ಬಗ್ಗೆ ಇಂದು ನಡೆಯುವ ವಿಚಾರಣೆ ರಾಜ್ಯದ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ.