ನವದೆಹಲಿ: ಕೇರಳದಿಂದ ಕರ್ನಾಟಕಕ್ಕೆ ವೈದ್ಯಕೀಯ ಚಿಕಿತ್ಸೆಗಾಗಿ ಜನರ ಸಂಚಾರಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ತೀರ್ಮಾನಿಸಲು ಸುಪ್ರೀಂಕೋರ್ಟ್ ಕೇಂದ್ರ ಆರೋಗ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದೆ.
ಕೆಲ ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳದ ಕಾಸರಗೋಡಿನಿಂದ ಚಿಕಿತ್ಸೆಗಾಗಿ ಮಂಗಳೂರಿಗೆ ಬರುವ ರೋಗಿಗಳಿಗೆ ಕರ್ನಾಟಕ ಸರ್ಕಾರ ನಿರ್ಬಂಧ ಹೇರಿತ್ತು. ಬಳಿಕ ಕಾಸರಗೋಡು ಹಾಗೂ ಮಂಗಳೂರು ಹೆದ್ದಾರಿಯನ್ನು ಬಂದ್ ಮಾಡಿತ್ತು. ರಾಜ್ಯ ಸರ್ಕಾರದ ತೀರ್ಮಾನದ ವಿರುದ್ಧ ಸಮಸ್ಯೆ ಬಗೆಹರಿಸುವಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ಆ ಬಳಿಕ ಕೇರಳ ಸರ್ಕಾರ ಕೇರಳ ಹಾಗೂ ಕರ್ನಾಟಕ ಗಡಿ ತೆರವುಗೊಳಿಸುವಂತೆ ಕರ್ನಾಟಕಕ್ಕೆ ಸೂಚಿಸಲು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಸದ್ಯ ಈ ಸಂಬಂಧ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಉಭಯ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ತೀರ್ಮಾನಿಸಲು ಕೇಂದ್ರ ಆರೋಗ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್ 7ರಂದು ನಡೆಯಲಿದೆ.