ನವದೆಹಲಿ: ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ಸುದ್ದಿ ಮತ್ತು ಪ್ರಚೋದನಾಕಾರಿ ಹೇಳಿಕೆಗಳು ವೈರಲ್ ಆಗುತ್ತಿರುವ ಹಿನ್ನೆಲೆ ಸೂಕ್ತ ಕಾನೂನು ರೂಪಿಸಲು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಕೋರಿ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.
ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ನಿಯಂತ್ರಿಸಲು, ಪ್ರಚೋದನಾಕಾರಿ ಹೇಳಿಕೆ ಮತ್ತು ನಕಲಿ ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ವಕೀಲ ವಿನೀತ್ ಜಿಂದಾಲ್ ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತು. ನಂತರ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ, ವಿ ರಾಮಸುಬ್ರಮಣ್ಯನ್ ಅವರನ್ನೊಳಗೊಂಡ ಪೀಠ ಈ ನೋಟಿಸ್ ಜಾರಿ ಮಾಡಿದೆ.
ಅಲ್ಪಾವಧಿಯೊಳಗೆ ನಕಲಿ ಸುದ್ದಿ ಮತ್ತು ಪ್ರಚೋದನಾಕಾರಿ ಭಾಷಣಗಳನ್ನು ಸ್ವಯಂಚಾಲಿತವಾಗಿ ತೆಗೆದುಹಾಕುವ ವ್ಯವಸ್ಥೆ ರೂಪಿಸುವಂತೆ ಮನವಿಯಲ್ಲಿ ತಿಳಿಸಲಾಗಿತ್ತು. ಸಾಂಪ್ರದಾಯಿಕ ಮಾಧ್ಯಮಗಳಿಗಿಂತ ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹರಡುವುದು ಸುಲಭವಾಗಿದೆ. ಹಾಗಾಗಿ ಸಾಮಾಜಿಕ ಮಾಧ್ಯಮವನ್ನು ದುರುಪಯೋಗಪಡಿಸಿಕೊಂಡು ದೇಶದಲ್ಲಿ ಕೆಲವು ಕೋಮು ಹಿಂಸಾಚಾರದ ಘಟನೆಗಳು ನಡೆದಿರುವುದನ್ನೂ ಸಹ ಉಲ್ಲೇಖಿಸಲಾಗಿದೆ. ಈ ಕುರಿತು ಸಂಬಂಧಿಸಿದ ಸಂಪೂರ್ಣ ಕಾನೂನು ಚೌಕಟ್ಟನ್ನು ಪರಿಶೀಲಿಸಲು ಮತ್ತು ಮಾರ್ಗಸೂಚಿಗಳನ್ನು ಪರಿಶೀಲಿಸಲು ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ಸಮಿತಿ ಸ್ಥಾಪಿಸಲು ಪೀಠ ಕೋರಿದೆ. ಜೊತೆಗೆ ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ.