ನವದೆಹಲಿ : ದೇಶದಾದ್ಯಂತ ಲಾಕ್ ಡೌನ್ ಹೇರಿರುವ ಹಿನ್ನೆಲೆ ವಲಸೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಅವರಿಗೆ ಸೌಲಭ್ಯಗಳನ್ನು ಒದಗಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.
ಮಹಿಳೆಯರು, ಮಕ್ಕಳು, ಹಿರಿಯರು ಸೇರಿದಂತೆ ವಲಸೆ ಕಾರ್ಮಿಕರು ಮತ್ತು ಅವರ ಕುಟುಂಬಗಳು ತಮ್ಮ ತಮ್ಮ ಹಳ್ಳಿಗಳಿಗೆ ಕಾಲ್ನಡಿಗೆಯಲ್ಲಿ ಸಾಗುವ ದುಃಸ್ಥಿತಿಗೆ ತಲುಪಿದ್ದಾರೆ. ಹೀಗಾಗಿ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಆಹಾರ, ನೀರು, ಆಶ್ರಯ ಮತ್ತು ತುರ್ತು ಸೌಲಭ್ಯಗಳನ್ನು ಒದಗಿಸಿಕೊಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಮತ್ತು ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ಅವರನ್ನೂಳಗೊಂಡ ದ್ವಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಲಿದೆ.
ಕೊರೊನಾ ವೈಸರ್ ಸೋಂಕು ಹರಡುವುದನ್ನು ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ದೇಶದಾದ್ಯಂತ 21 ದಿನಗಳ ಲಾಕ್‌ಡೌನ್ ಘೋಷಿಸಿದ್ದು, ರೋಗವನ್ನು ಎದುರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಏಕೈಕ ದಾರಿ ಎಂದು ತಿಳಿಸಿದ್ಧಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ ಇದುವರೆಗೆ ದೇಶದಲ್ಲಿ ಒಟ್ಟು 1024 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ ಮತ್ತು 27 ಸಾವುಗಳು ಸಂಭವಿಸಿವೆ.