ನವದೆಹಲಿ : ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಅಲ್ಲಿಂದ ತೆರವುಗೊಳಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 16ರಂದು ಸುಪ್ರೀಂಕೋರ್ಟ್ ನಡೆಸಲಿದೆ.
ರಸ್ತೆ ತಡೆಗಳಿಂದಾಗಿ ಪ್ರಯಾಣಿಕರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅಲ್ಲದೇ ಹೀಗೆ ದೊಡ್ಡ ಮಟ್ಟದಲ್ಲಿ ಗುಂಪುಗೂಡಿ ಧರಣಿ ನಡೆಸುವುದು ಕೋವಿಡ್ ಕೇಸ್ಗಳ ಹೆಚ್ಚಳಕ್ಕೆ ಕಾರಣವಾಗಬಹುದು. ಹೀಗಾಗಿ ಪ್ರತಿಭಟನಾ ಸ್ಥಳದಿಂದ ರೈತರನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಿ ಕಾನೂನು ವಿದ್ಯಾರ್ಥಿ ರಿಷಭ್ ಶರ್ಮಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ, ನ್ಯಾ.ಎ ಎಸ್ ಬೋಪಣ್ಣ ಮತ್ತು ನ್ಯಾ. ವಿ ರಾಮಸುಬ್ರಮಣಿಯನ್ ಡಿ.16ಕ್ಕೆ ನಡೆಸಲಿದ್ದಾರೆ.
ಇದನ್ನೂ ಓದಿ: ಸಿಂಘು ಗಡಿಯಲ್ಲಿ ಪ್ರತಿಭಟಿಸುತ್ತಿದ್ದ ರೈತ ಸಾವು
ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಸಿಂಘು, ಟಿಕ್ರಿ ಸೇರಿದಂತೆ ದೆಹಲಿಯ ಗಡಿಗಳಲ್ಲಿ ಪಂಜಾಬ್ ಹಾಗೂ ಹರಿಯಾಣ ರೈತರು ಕಳೆದ 18 ದಿನಗಳಿಂದ 'ದೆಹಲಿ ಚಲೋ' ಪ್ರತಿಭಟನೆ ನಡೆಸುತ್ತಿದ್ದಾರೆ. ಗಡಿಭಾಗಗಳಲ್ಲೇ ರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲಾಗುತ್ತಿದೆ. ಪಟ್ಟುಬಿಡದ ರೈತರು ಹಗಲು-ರಾತ್ರಿ ಧರಣಿ ಮುಂದುವರೆಸಿದ್ದಾರೆ.