ನವದೆಹಲಿ: ಎಲ್ಲ ವಯೋಮಾನದ ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಅವಕಾಶ ನೀಡಬೇಕೆನ್ನುವ ಸುಪ್ರೀಂಕೋರ್ಟ್ ತೀರ್ಪಿನ ಮರುಪರಿಶೀಲನೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಜ.13ರಂದು ಸುಪ್ರೀಂಕೋರ್ಟ್ ನಡೆಸಲಿದೆ.
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಅವಕಾಶ ನೀಡಬೇಕು ಎಂದು 2018ರಲ್ಲಿ ಆಗಿನ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ತೀರ್ಪು ನೀಡಿತ್ತು. ಪೂಜಾ ಸ್ಥಳಗಳಿಗೆ ಮಹಿಳೆಯರ ಪ್ರವೇಶ ಕೇವಲ ಹಿಂದೂಗಳ ದೇವಾಲಯಕ್ಕಷ್ಟೇ ಸೀಮಿತವಾಗಿಲ್ಲ. ಇದು ಎಲ್ಲಾ ಮಸೀದಿಗಳಿಗೆ ಮಹಿಳೆಯರ ಪ್ರವೇಶಕ್ಕೂ ಅನ್ವಯಿಸುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿತ್ತು.
ಆದರೆ, ಈ ತೀರ್ಪಿನ ಬಗ್ಗೆ ದೇಶಾದ್ಯಂತ ಪರ-ವಿರೋಧದ ಚರ್ಚೆಯಾಗಿತ್ತು. ತೀರ್ಪಿನ ಮರು ಪರಿಶೀಲನೆ ನಡೆಸಬೇಕು ಎಂದು ಕೋರ್ಟ್ಗೆ ಸಾಕಷ್ಟು ಅರ್ಜಿಗಳು ಬಂದಿದ್ದವು. ಮರುಪರಿಶೀಲನಾ ಅರ್ಜಿಯನ್ನು ಅಂಗೀಕರಿಸಿದ ಕೋರ್ಟ್, ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿತ್ತು. ಇದೀಗ ಜ.13ರಂದು ಈ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ನ 9 ನ್ಯಾಯಮೂರ್ತಿಗಳನ್ನೊಳಗೊಂಡ ಪೀಠವು ವಿಚಾರಣೆ ನಡೆಸಲಿದೆ.