ನವದೆಹಲಿ: ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದ ದೆಹಲಿ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.
ದೆಹಲಿಯ ನಿಜಾಮುದ್ದೀನ್ನಲ್ಲಿನ ಶೀಲಾ ದೀಕ್ಷಿತ್ ನಿವಾಸದಲ್ಲಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ನಂತರ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು.
ಮೆರವಣಿಗೆ ಮೂಲಕ ಸಾಗಿದ ಶೀಲಾ ದೀಕ್ಷಿತ್ ಪಾರ್ಥಿವ ಶರೀರವನ್ನು ದೆಹಲಿಯ ನಿಗಮ್ಬೋಧ್ ಘಾಟ್ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
ಅಂತ್ಯ ಸಂಸ್ಕಾರಕ್ಕೂ ಮುನ್ನ ಕಾಂಗ್ರೆಸ್ನ ಹಿರಿಯ ನಾಯಕರಾದ ಸೋನಿಯಾ ಗಾಂಧಿ, ಅಹ್ಮದ್ ಪಟೇಲ್, ಮನಮೋಹನ್ ಸಿಂಗ್, ಪ್ರಿಯಾಂಕ ಗಾಂಧಿ ವಾದ್ರಾ ಹಾಗೂ ಬಿಜೆಪಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಸುಷ್ಮಾ ಸ್ವರಾಜ್ ಸೇರಿದಂತೆ ಹಲವಾರು ಗಣ್ಯರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.