ಇಟಾವಾ (ಉತ್ತರ ಪ್ರದೇಶ): ಇಟವಾ ಜಿಲ್ಲೆಯ ಫ್ರೆಂಡ್ಸ್ ಕಾಲೋನಿ ಪ್ರದೇಶದಲ್ಲಿ ಮಿನಿ ಟ್ರಕ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ರೈತರು ಸಾವಿಗೀಡಾಗಿದ್ದಾರೆ.
ಮುಂಜಾನೆ ಈ ಘಟನೆ ನಡೆದಿದ್ದು, ಹಣ್ಣುಗಳನ್ನು ಮಾರಾಟ ಮಾಡಲು ತೆರಳಿದ್ದ ರೈತರು ಮಿನಿ ಟ್ರಕ್ನಲ್ಲಿ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಮತ್ತೊಂದು ಟ್ರಕ್ಗೆ ಗುದ್ದಿದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ರೈತ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಅಪಘಾತದಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.
ಘಟನೆಯ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಷಾದ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.