ನವದೆಹಲಿ: ಮೂರು ಕೃಷಿ ಬಿಲ್ಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ದೆಹಲಿ ಗಡಿಯಲ್ಲಿ ಪ್ರತಿಭಟನೆ ಮುಂದುವರೆಸಿದ್ದಾರೆ. ಈ ಮಧ್ಯೆ ರೈತರ ಆಂದೋಲನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ ಇಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ರೈತ ವಿರೋಧಿ ಮೂರು ಕೃಷಿ ಕಾನೂನುಗಳನ್ನು ರದ್ದು ಮಾಡಬೇಕೆಂದು ಕಳೆದ ನವೆಂಬರ್ 26 ರಿಂದ ದೆಹಲಿಯ ಗಡಿಗಳಲ್ಲಿ ರೈತರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ರೈತರ ನಡುವೆ 8 ನೇ ಸುತ್ತಿನ ಮಾತುಕತೆ ನಿನ್ನೆ ನಡೆದಿದ್ದು, ಅದೂ ಕೂಡ ವಿಫಲವಾಗಿದೆ. ಮೂರು ಕಾಯ್ದೆಗಳನ್ನು ಹಿಂಪಡೆದರೆ ಮಾತ್ರ ನಾವು ಮನೆಗಳಿಗೆ ಹಿಂದಿರುತ್ತೇವೆ. ಇಲ್ಲವಾದಲ್ಲಿ, ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ಸರ್ಕಾರಕ್ಕೆ ಪ್ರತಿಭಟನಾಕಾರರು ತಿಳಿಸಿದ್ದಾರೆ. ಮುಂದಿನ ಸುತ್ತಿನ ಸಭೆ ಜನವರಿ 15 ರಂದು ನಡೆಯಲಿದೆ.
ಈ ಹಿನ್ನೆಲೆ ಪರಿಸ್ಥಿತಿಯ ಕುರಿತು ಚರ್ಚಿಸಲು ಮತ್ತು ರೈತರ ಪ್ರತಿಭಟನೆಯನ್ನು ಬೆಂಬಲಿಸುವ ಬಗ್ಗೆ ಕಾರ್ಯತಂತ್ರವನ್ನು ರೂಪಿಸಲು ಇಂದು ಸೋನಿಯಾ ಗಾಂಧಿ ಸಭೆ ಕರೆದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.