ನವದೆಹಲಿ: ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ನೀಡಿದ ಐತಿಹಾಸಿಕ ತೀರ್ಪಿನ ಪ್ರಕಾರ ಮಸೀದಿ ನಿರ್ಮಾಣಕ್ಕೆ ಜಾಗ ನೀಡಿರುವ ಬಗ್ಗೆ ಚರ್ಚೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಸುನ್ನಿ ವಕ್ಫ್ ಬೋರ್ಡ್ ತಿಳಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಅಧ್ಯಕ್ಷ ಜಫರ್ ಫಾರೂಖಿ, ಮುಂದಿನ 15 ದಿನಗಳಲ್ಲಿ ಸುನ್ನಿ ವಕ್ಫ್ ಬೋರ್ಡ್ ಮೀಟಿಂಗ್ ಕರೆಯಲಾಗುತ್ತದೆ. ಈ ವೇಳೆ ಮಸೀದಿ ನಿರ್ಮಾಣ ಮಾಡಲು 5 ಜಾಗ ನೀಡಿರುವ ಸುಪ್ರಿಂಕೋರ್ಟ್ನ ತೀರ್ಪನ್ನು ಒಪ್ಪಿಕೊಳ್ಳುವ ಕುರಿತು ಚರ್ಚೆ ಮಾಡಲಾಗುತ್ತದೆ ಎಂದರು.
ಸುಪ್ರೀಂಕೋರ್ಟ್ ತೀರ್ಪಿನ ಜೊತೆಗೆ ಮುಸ್ಲಿಂ ಸಮುದಾಯದ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ. ಮುಸ್ಲಿಂ ಧಾರ್ಮಿಕ ಸ್ಥಳಗಳ ರಕ್ಷಣೆ ಮತ್ತು ಪ್ರಾರ್ಥನೆ ವಿಷಯಗಳ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಿತ ಜಾಗದ ಬಗ್ಗೆ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್, ವಿವಾದಿತ ಜಾಗವನ್ನು ರಾಮಮಂದಿರ ನಿರ್ಮಾಣಕ್ಕೆ ಹಿಂದೂಗಳಿಗೆ ಒಪ್ಪಿಸಿ, ಸುನ್ನಿ ವಕ್ಫ್ ಮಂಡಳಿಗೆ ಮಸೀದಿ ನಿರ್ಮಾಣಕ್ಕೆ ಪ್ರತ್ಯೇಕ 5 ಎಕರೆ ಪರ್ಯಾಯ ಜಾಗ ನೀಡುವಂತೆ ತಿಳಿಸಿತ್ತು.