ನವದೆಹಲಿ: ತೊಂಭತ್ತು ವರ್ಷ ವಯಸ್ಸಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ ಪಿಂಚಣಿ ಹಣ ನೀಡಲು ನಿರಾಕರಿಸಿದ ಕೇಂದ್ರದ ನಿಲುವನ್ನು ಪ್ರಶ್ನಿಸಿ ಪದೇ ಪದೇ ದೆಹಲಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದನ್ನು ಗಮನಿಸಿದ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ದೇವ್ ನಾರಾಯಣ್ ಮಿಶ್ರಾ ಅವರಿಗೆ ಪಿಂಚಣಿ ನೀಡುವಂತೆ ನಿರ್ದೇಶನ ನೀಡಿದ ದೆಹಲಿ ಹೈಕೋರ್ಟ್ ಆದೇಶವನ್ನು ಕೇಂದ್ರ ಸರ್ಕಾರ ಪ್ರಶ್ನಿಸಿತ್ತು. ಸ್ವಾತಂತ್ರ್ಯ ಹೋರಾಟದ ಚಳವಳಿಯಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಯಾವುದೇ ಪ್ರತಿಫಲದ ಆಕಾಂಕ್ಷೆ ಇಲ್ಲದೆ ಸೇವೆ ಸಲ್ಲಿಸಿದವರ ಗೌರವಾರ್ಥವಾಗಿ 1972ರ ಸ್ವಾತಂತ್ರ್ಯ ಸೈನಿಕ್ ಸಮ್ಮಾನ್ ಪಿಂಚಣಿ ಯೋಜನೆಯಡಿ ಪಿಂಚಣಿ ನೀಡುವುದು ನ್ಯಾಯೋಚಿತ ಎಂದು ಕೋರ್ಟ್ ಹೇಳಿತ್ತು.
ಸ್ವಾತಂತ್ರ್ಯ ಹೋರಾಟಗಾರರ ಮತ್ತು ಹುತಾತ್ಮರ ಕುಟುಂಬಗಳಿಗೆ ಪಿಂಚಣಿ ನೀಡುವ ಉದ್ದೇಶದಿಂದ ಈ ಯೋಜನೆ ಪರಿಚಯಿಸಲಾಗಿದೆ ಎಂದು ದೆಹಲಿ ಹೈಕೋರ್ಟ್ 2018ರ ಅಕ್ಟೋಬರ್ನಲ್ಲಿ ಕೇಂದ್ರ ಸರ್ಕಾರಕ್ಕೆ ಆದೇಶಿಸಿತ್ತು.
ದೆಹಲಿ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಿದ್ದ ಕೇಂದ್ರದ ಮನವಿಯನ್ನು ಸುಪ್ರೀಂಕೋರ್ಟ್ನ ನ್ಯಾಯಮುರ್ತಿಗಳಾದ ಎಸ್.ಕೆ.ಕೌಲ್ ಮತ್ತು ಕೆ.ಎಂ. ಜೋಸೆಪ್ ಅವರಿದ್ದ ನ್ಯಾಯಪೀಠ ವಜಾಗೊಳಿಸಿದೆ. 'ಇಂತಹ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದು ಆಶ್ಚರ್ಯಕರವಾಗಿದೆ. ಇದು ನ್ಯಾಯಾಲಯದ ಸಮಯದ ವ್ಯರ್ಥ ಮಾಡಿದಂತಿದೆ. ಎರಡು ವಾರಗಳಲ್ಲಿ ವೆಚ್ಚದ 10,000 ರೂ.ಗಳನ್ನು ವಕೀಲರ ಕಲ್ಯಾಣ ನಿಧಿಯಲ್ಲಿ ಠೇವಣಿ ಇರಿಸುವಂತೆ ನ್ಯಾಯಪೀಠ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ'.